ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹೊರಗುತ್ತಿಗೆ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನದ ಬದಲಿಗೆ ಹಳೆಯ ದರದಲ್ಲೇ ವೇತನ ಪಾವತಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹೊರಡಿಸಿದ್ದ ಸುತ್ತೋಲೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
2026ರ ಮೇ 22ರಂದು ರಾಜ್ಯ ಸರ್ಕಾರ ಪರಿಷ್ಕರಿಸಿ ಜಾರಿಗೊಳಿಸಿದ ನೂತನ ಕನಿಷ್ಠ ವೇತನದ ಬದಲಿಗೆ ಹಳೆಯ ದರದಲ್ಲೇ ವೇತನ ನೀಡಬೇಕು ಹಾಗೂ ಹೊಸ ದರದಲ್ಲಿ ವೇತನ ಪಾವತಿಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಆಯುಕ್ತರು ಸೆಪ್ಟೆಂಬರ್ 5ರಂದು ಸುತ್ತೋಲೆ ಹೊರಡಿಸಿದ್ದರು. ಇದರಿಂದ ಕಂಪ್ಯೂಟರ್ ಆಪರೇಟರ್ಗಳು, ಚಾಲಕರು ಮತ್ತು ಡಿ-ಗ್ರೂಪ್ ನೌಕರರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಹೈಕೋರ್ಟ್ ಮೆಟ್ಟಿಲೇರಿತ್ತು.
ಕನಿಷ್ಠ ವೇತನ ಕಾಯ್ದೆಯಡಿ ಹೊರಡಿಸಲಾದ ಅಧಿಸೂಚನೆಯನ್ನು ಆಡಳಿತಾತ್ಮಕ ಸುತ್ತೋಲೆಗಳ ಮೂಲಕ ತಡೆಹಿಡಿಯಲು ಸಾಧ್ಯವಿಲ್ಲ. ನಿಗದಿತ ಕನಿಷ್ಠ ವೇತನಕ್ಕಿಂತ ಕಡಿಮೆ ನೀಡುವುದು ಸಂವಿಧಾನದ 14, 21 ಹಾಗೂ 23ನೇ ವಿಧಿಗಳ ಉಲ್ಲಂಘನೆಯಾಗುತ್ತದೆ ಎಂಬ ಅರ್ಜಿದಾರರ ವಾದವನ್ನು ಆಲಿಸಿದ ನ್ಯಾಯಮೂರ್ತಿ ಎಚ್.ಟಿ. ನರೇಂದ್ರ ಪ್ರಸಾದ್ ಅವರಿದ್ದ ಏಕಸದಸ್ಯ ಪೀಠವು ಸುತ್ತೋಲೆಗೆ ತಡೆ ನೀಡಿದೆ. ಅಲ್ಲದೆ, ರಾಜ್ಯ ಸರ್ಕಾರ, ಕಾರ್ಮಿಕ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿದೆ.




