ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಎನ್‌ಡಿಎ ಮೈತ್ರಿಕೂಟದ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ವಿಚಾರದಲ್ಲಿ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಡುವೆ ಟಿಕೆಟ್ ಪೈಪೋಟಿ ಏರ್ಪಟ್ಟಿದೆ.
ಈ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಉತ್ಸಾಹ ತೋರಿದ್ದು, ಈಗಾಗಲೇ ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಿ ಚುನಾವಣಾ ಪೂರ್ವ ತಯಾರಿ ಆರಂಭಿಸಿದ್ದಾರೆ.
ಮತ್ತೊಂದೆಡೆ, ಕ್ಷೇತ್ರವನ್ನು ಉಳಿಸಿಕೊಳ್ಳಲು ರಾಜ್ಯ ಬಿಜೆಪಿ ನಾಯಕರು ಸಹ ತಮ್ಮದೇ ಪಕ್ಷದ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂಬ ಲೆಕ್ಕಾಚಾರದಲ್ಲಿದ್ದಾರೆ. ಎರಡೂ ಪಕ್ಷಗಳ ಆಕಾಂಕ್ಷಿಗಳ ಒತ್ತಡದಿಂದಾಗಿ ಅಭ್ಯರ್ಥಿ ಆಯ್ಕೆ ಸದ್ಯಕ್ಕೆ ಕಗ್ಗಂಟಾಗಿ ಪರಿಣಮಿಸಿದೆ.
ರಾಜ್ಯ ನಾಯಕರ ಹಂತದ ಮಾತುಕತೆಯ ಬಳಿಕ, ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಬೇಕೇ ಅಥವಾ ಬಿಜೆಪಿಯೇ ಸ್ಪರ್ಧಿಸಬೇಕೇ ಎಂಬ ಕುರಿತು ಬಿಜೆಪಿ ವರಿಷ್ಠರು ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ. ಹೀಗಾಗಿ ಮೈತ್ರಿಕೂಟದ ಟಿಕೆಟ್ ಯಾರ ಪಾಲಾಗಲಿದೆ ಎಂಬುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.




