ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಕಣಕ್ಕಿಳಿಯಲು ಪೈಪೋಟಿ ನಡೆಸುತ್ತಿರುವ ಬೆನ್ನಲ್ಲೇ, ಎನ್ಡಿಎ ಮೈತ್ರಿ ಅಭ್ಯರ್ಥಿ ಆಯ್ಕೆಯ ಅಂತಿಮ ನಿರ್ಧಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಗಲೇರಿದೆ.
ಈ ಸಂಬಂಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನವದೆಹಲಿಯಲ್ಲಿ ಪ್ರತ್ಯೇಕವಾಗಿ ಶಾ ಅವರನ್ನು ಭೇಟಿ ಮಾಡಿ, ಕ್ಷೇತ್ರದ ರಾಜಕೀಯ ಚಿತ್ರಣದ ಕುರಿತು ಸಮಗ್ರ ವರದಿ ನೀಡಿದ್ದಾರೆ.
ಪ್ರತಿಷ್ಠೆಗಿಂತ ಗೆಲುವು ಮುಖ್ಯ ಎಂದ ನಾಯಕರು: ಕ್ಷೇತ್ರದಲ್ಲಿ ಕಾಡುಗೊಲ್ಲ ಸಮುದಾಯದ ಪ್ರಾಬಲ್ಯ, ಸಿದ್ದರಾಮಯ್ಯ ಅವರ ಪ್ರಭಾವ ಹಾಗೂ ಬಿಜೆಪಿಯ ಸಾಂಪ್ರದಾಯಿಕ ಮತಬ್ಯಾಂಕ್ ಕುರಿತು ವಿಜಯೇಂದ್ರ ವರಿಷ್ಠರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಜೆಡಿಎಸ್ ಬೇಡಿಕೆ ಸಹಜವಾದರೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದಿರುವ ಅವರು, "ಟಿಕೆಟ್ ವಿಚಾರದಲ್ಲಿ ಪ್ರತಿಷ್ಠೆಯಿಲ್ಲ, ಕ್ಷೇತ್ರ ಗೆಲ್ಲುವುದೇ ನಮ್ಮ ಗುರಿ" ಎಂದು ಸ್ಪಷ್ಟಪಡಿಸಿದ್ದಾರೆ. ಇತ್ತ ಕುಮಾರಸ್ವಾಮಿ ಕೂಡ ಮೈತ್ರಿ ಬಲವರ್ಧನೆಗೆ ಶಾ ಮಾರ್ಗದರ್ಶನ ಪಡೆದಿದ್ದಾರೆ.
ಸಂಘಟನೆಗೆ ಒತ್ತು, ಕಾಂಗ್ರೆಸ್ ನಡೆಗೆ ಕುತೂಹಲ:
ದೆಹಲಿ ಭೇಟಿ ಬೆನ್ನಲ್ಲೇ ವಿಜಯೇಂದ್ರ ಅವರು ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಸಂಸದ ಪಿ.ಸಿ. ಮೋಹನ್ ಜೊತೆ ಸೇರಿ ಬೆಂಗಳೂರಿನಲ್ಲಿ ಪಕ್ಷ ಸಂಘಟನೆ ಮತ್ತು ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣಾ ಸಿದ್ಧತೆ ಕುರಿತು ಸಭೆ ನಡೆಸಿದ್ದಾರೆ.
ಇನ್ನೊಂದೆಡೆ ಕಾಂಗ್ರೆಸ್ ಇನ್ನೂ ಅಭ್ಯರ್ಥಿ ಘೋಷಿಸಿಲ್ಲದಿದ್ದು, ಹಿರಿಯೂರು ಟಿಕೆಟ್ ಹಂಚಿಕೆಯು 2028ರ ವಿಧಾನಸಭಾ ಚುನಾವಣೆಯ ಮೈತ್ರಿ ಸೂತ್ರಕ್ಕೆ ದಿಕ್ಸೂಚಿಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.




