ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಗೂ ಮುನ್ನವೇ ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ದಿವಂಗತ ಡಿ. ಸುಧಾಕರ್ ಅವರ ನಿಧನದಿಂದ ತೆರವಾಗಿರುವ ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಭರ್ಜರಿ ರಣತಂತ್ರ ರೂಪಿಸುತ್ತಿದ್ದರೆ, ಇತ್ತ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು ಜೆಡಿಎಸ್ ನಡುವೆ ಟಿಕೆಟ್ ಹಂಚಿಕೆಯ ಗೊಂದಲ ಮೂಡಿದೆ.
ದೋಸ್ತಿಗಳ ನಡುವೆ ಪೈಪೋಟಿ:
ಹಿರಿಯೂರು ಟಿಕೆಟ್ ಬಿಜೆಪಿಗೆ ಸಿಗಬೇಕೆಂದು ವಿಪಕ್ಷ ನಾಯಕ ಆರ್. ಅಶೋಕ್ ಒಲವು ತೋರಿದ್ದು, ಜೆಡಿಎಸ್ ಮನವೊಲಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, "ನನಗೆ ಅಭ್ಯರ್ಥಿ ಹಾಕುವ ಪ್ರತಿಷ್ಠೆ ಇಲ್ಲ; ಆದರೆ ಬಿಜೆಪಿ ನಾಯಕರು ಕ್ಷೇತ್ರದ ವಾಸ್ತವ ಸ್ಥಿತಿ ಅರ್ಥಮಾಡಿಕೊಳ್ಳಬೇಕು. ಗೆಲುವು ಮುಖ್ಯವೇ ಹೊರತು ಯಾವ ಪಕ್ಷ ಎಂಬುದಲ್ಲ" ಎಂದು ಖಡಕ್ ಸಲಹೆ ನೀಡಿದ್ದಾರೆ. ಈ ವಿಚಾರವಾಗಿ ಈಗಾಗಲೇ ಬಿಜೆಪಿ ಹೈಕಮಾಂಡ್ ಜೊತೆ ಮಾತುಕತೆ ನಡೆಸಿರುವುದಾಗಿಯೂ ಅವರು ತಿಳಿಸಿದ್ದಾರೆ.
ಕಾಂಗ್ರೆಸ್‌ನಿಂದ ಅನುಕಂಪದ ಅಸ್ತ್ರ?:
ಮತ್ತೊಂದೆಡೆ, ಈ ಉಪಚುನಾವಣೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ಪ್ರತಿಷ್ಠೆಯ ಕಣವಾಗಿದೆ. ಕ್ಷೇತ್ರವನ್ನು ಕೈವಶದಲ್ಲೇ ಉಳಿಸಿಕೊಳ್ಳಲು ಮುಂದಾಗಿರುವ ಕಾಂಗ್ರೆಸ್, ಅನುಕಂಪದ ಅಲೆಯ ಲಾಭ ಪಡೆಯಲು ಡಿ. ಸುಧಾಕರ್ ಅವರ ಪುತ್ರ ಸುಹಾಸ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ದಟ್ಟವಾಗಿದೆ. ಒಟ್ಟಿನಲ್ಲಿ ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ಹಿರಿಯೂರು ಕಣ ರಂಗೇರಿದೆ.




