ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರಿನಲ್ಲಿ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ತೀವ್ರವಾಗಿ ಕಿಡಿಕಾರಿದ್ದಾರೆ.
ಅಸ್ತಿತ್ವ ಕಳೆದುಕೊಂಡ ಕತ್ತಲೆ ಜಗತ್ತಿನ ಆತ್ಮದಂತೆ ಪರಿತಪಿಸುತ್ತಿರುವ ಆ ವ್ಯಕ್ತಿ ವಾರಕ್ಕೊಮ್ಮೆ ಗೋಗರೆದು ಮಾಧ್ಯಮಗಳನ್ನು ಕರೆಸಿಕೊಂಡು ಅಸಂಬದ್ಧ ಹೇಳಿಕೆ ನೀಡುತ್ತಾ ಅಸ್ತಿತ್ವ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾನೆ ಎಂದು ಎಕ್ಸ್ (ಟ್ವಿಟರ್) ಮೂಲಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
"ಪೊಲೀಸ್ ಠಾಣೆಗೆ ನುಗ್ಗುತ್ತೇನೆ" ಎಂದಿರುವ ಆ ವ್ಯಕ್ತಿಗೆ ಮುಕ್ತ ಆಹ್ವಾನವಿದೆ. ಪೊಲೀಸ್ ಠಾಣೆಗೆ ನುಗ್ಗಿದ ನಂತರ ಸೀದಾ ಪರಪ್ಪನ ಅಗ್ರಹಾರ ಜೈಲಿಗೆ ನುಗ್ಗಿಸುವ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುವುದು ಎಂದು ಮಾಜಿ ಸಂಸದರಿಗೆ ಗೃಹ ಇಲಾಖೆ ಪರವಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಕರ್ತವ್ಯಕ್ಕೆ ಯಾರೇ ಅಡ್ಡಿಪಡಿಸಿದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲು ಗೃಹ ಇಲಾಖೆ ಸನ್ನದ್ಧವಾಗಿದೆ. ಸೂಕ್ಷ್ಮ ಸಂದರ್ಭಗಳನ್ನು ಬಳಸಿಕೊಂಡು ಸಮಾಜದ ಸ್ವಾಸ್ಥ್ಯ ಕದಡುವ ಪ್ರಯತ್ನಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಹಾಗೂ ಪೊಲೀಸರ ನೈತಿಕ ಸ್ಥೈರ್ಯ ಕಸಿಯಲು ಬಿಡುವುದಿಲ್ಲ ಎಂದು ಅವರು ಗುಡುಗಿದ್ದಾರೆ.
ವಿವಾದದ ಹಿನ್ನೆಲೆ ಏನು?: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ನಡೆದ ಶಾಂತಿ ಸಭೆಯಲ್ಲಿ ಮೈಸೂರು ಜಿಲ್ಲೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ್ ಅವರು, ಮಸೀದಿ ಮುಂದೆ ಪಟಾಕಿ ಸಿಡಿಸಿದ್ರೆ ಗ್ರಹಚಾರ ಬಿಡಿಸ್ತೇನೆ ಎಂದು ಎಚ್ಚರಿಕೆ ನೀಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಇನ್ಸ್‌ಪೆಕ್ಟರ್ ಧನಂಜಯ್ ಅವರ ಈ ಹೇಳಿಕೆ ಖಂಡಿಸಿ ಪ್ರತಿಕ್ರಿಯಿಸಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ, ಇನ್ನೊಂದು ಸಲ ಆ ರೀತಿ ಮಾತನಾಡಿದ್ರೆ ಠಾಣೆಗೆ ನುಗ್ಗುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು. ಅಲ್ಲದೆ, ಸುದ್ದಿಗಾರರೊಂದಿಗೆ ಮಾತನಾಡಿ ಇನ್ಸ್ ಪೆಕ್ಟರ್ ರೋಡ್ ಸೈಡ್ ತರ್ಲೆ ರೀತಿ ಮಾತನಾಡಿದ್ದಾರೆ, ಅದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬೆಳವಣಿಗೆಯ ಬೆನ್ನಲ್ಲೇ ಗೃಹ ಸಚಿವರು ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ತಿರುಗೇಟು ನೀಡಿದ್ದಾರೆ.




