ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಂಬರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಬಿಜೆಪಿ ಘಟಕ, ಪಕ್ಷದ ಪ್ರಧಾನ ಕಚೇರಿಯಲ್ಲಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಪೂರ್ವಭಾವಿ ಸಭೆ ನಡೆಸಿತು.
ಸಭೆಯಲ್ಲಿ ಚುನಾವಣಾ ಕಾರ್ಯತಂತ್ರಗಳ ರೂಪಿಸುವಿಕೆ, ಹೊಸ ಮತದಾರರ ನೋಂದಣಿ ಅಭಿಯಾನವನ್ನು ತೀವ್ರಗೊಳಿಸುವುದು ಹಾಗೂ ಕ್ಷೇತ್ರಮಟ್ಟದಲ್ಲಿ ಪಕ್ಷದ ಸಂಘಟನಾತ್ಮಕ ಬಲ ಹೆಚ್ಚಿಸುವ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.
ಈ ಮಹತ್ವದ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಎಂ. ನಾಗರಾಜ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನಸಭೆ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಮ್ ಗೌಡ, ಪಿ. ರಾಜೀವ್ ಸೇರಿದಂತೆ ಹಲವು ಶಾಸಕರು ಹಾಗೂ ಹಿರಿಯ ಮುಖಂಡರು ಭಾಗವಹಿಸಿದ್ದರು.
ಸಭೆಯ ಬಳಿಕ ಮಾತನಾಡಿದ ನಾಯಕರು, "ಕಾರ್ಯಕರ್ತರ ಅಹೋರಾತ್ರಿ ಶ್ರಮ ಹಾಗೂ ಬಲವಾದ ಸಂಘಟನೆಯೊಂದಿಗೆ ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ನಿಶ್ಚಿತ" ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.




