ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ನಾಗರಿಕರ ಮತದಾನದ ಹಕ್ಕಿನ ರಕ್ಷಣೆಗಾಗಿ ‘ಮತ ಉಳಿಸಿ – ದೇಶ ಉಳಿಸಿ’ ಘೋಷಣೆಯಡಿ ರಾಜ್ಯಾದ್ಯಂತ ಸಂಘಟಿತ ಹೋರಾಟ ರೂಪಿಸಲು ಇಂಡಿಯಾ ಮೈತ್ರಿಕೂಟ ನಿರ್ಧರಿಸಿದೆ. ಶುಕ್ರವಾರ ಬೆಂಗಳೂರಿನ ಶಾಸಕರ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮೈತ್ರಿಕೂಟದ ರಾಜ್ಯಮಟ್ಟದ ಸಭೆಯಲ್ಲಿ ಹಲವು ಪ್ರಮುಖ ವಿಷಯಗಳ ಕುರಿತು ವಿಸ್ತೃತ ಚರ್ಚೆ ನಡೆಸಿ, ಮಹತ್ವದ ಮೂರು ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವುದು, ಪಟ್ಟಿಯಿಂದ ಕೈಬಿಡಲಾದ ಅರ್ಹ ಮತದಾರರ ಹೆಸರುಗಳನ್ನು ಮರುಸೇರ್ಪಡೆಗೊಳಿಸುವುದು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹೋರಾಟ ರೂಪಿಸಲು ಸಭೆಯಲ್ಲಿ ಒಮ್ಮತದ ತೀರ್ಮಾನ ತೆಗೆದುಕೊಳ್ಳಲಾಯಿತು.
ಸಭೆಯಲ್ಲಿ ಕೈಗೊಂಡ 3 ಪ್ರಮುಖ ನಿರ್ಣಯಗಳು:
ಮೈತ್ರಿಕೂಟದ ಸಮನ್ವಯ ಸಮಿತಿ ರಚನೆ: ಕರ್ನಾಟಕ ರಾಜ್ಯದಲ್ಲಿ ಇಂಡಿಯಾ ಮೈತ್ರಿಕೂಟದ ಹೋರಾಟವನ್ನು ಸಮರ್ಥವಾಗಿ ಸಂಘಟಿಸಲು ಸಮನ್ವಯ ಸಮಿತಿ ರಚಿಸುವುದು.
ದೆಹಲಿ ಚಲೋ: ನವೆಂಬರ್ 1ರಂದು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿನಿಧಿಗಳು ಭಾಗವಹಿಸುವುದು.
ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ಎಸ್ಐಆರ್ಪ್ರಕ್ರಿಯೆ ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ನವೆಂಬರ್ 5ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸುವುದು.
ಪ್ರಜಾಪ್ರಭುತ್ವದ ಅಡಿಪಾಯದ ಮೇಲೆ ದಾಳಿ: ಬಿ.ಕೆ. ಹರಿಪ್ರಸಾದ್
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿ.ಕೆ. ಹರಿಪ್ರಸಾದ್, "ಮತದಾನದ ಹಕ್ಕು ಪ್ರಜಾಪ್ರಭುತ್ವದ ಅಡಿಪಾಯ. ಯಾವುದೇ ಕಾರಣಕ್ಕೂ ನೈಜ ಹಾಗೂ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ದೇಶಾದ್ಯಂತ ಸುಮಾರು 13 ಕೋಟಿ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವ ವಿರೋಧಿ ಹಾಗೂ ಫ್ಯಾಸಿಸ್ಟ್ ಧೋರಣೆ ಅನುಸರಿಸುತ್ತಿದ್ದು, ಸ್ವತಂತ್ರ ಸಾಂವಿಧಾನಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸಬೇಕಾದ ಚುನಾವಣಾ ಆಯೋಗವು ರಾಜಕೀಯ ಪಕ್ಷವೊಂದರ ಪರವಾಗಿ ನಡೆದುಕೊಳ್ಳುತ್ತಿದೆ" ಎಂದು ಆರೋಪಿಸಿದರು.
ಜನಾಂದೋಲನ ರೂಪಿಸಲು ನಿರ್ಧಾರ:
ರಾಜ್ಯದಲ್ಲಿ ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ಸಿಪಿಐ(ಎಂಎಲ್) ಲಿಬರೇಶನ್, ಸಮಾಜವಾದಿ ಪಕ್ಷ ಹಾಗೂ ಫಾರ್ವರ್ಡ್ ಬ್ಲಾಕ್ ಸೇರಿದಂತೆ ವಿವಿಧ ಮಿತ್ರಪಕ್ಷಗಳನ್ನು ಒಳಗೊಂಡ ಸಮನ್ವಯ ಸಮಿತಿಯ ಮೂಲಕ ಬೆಂಗಳೂರಿನಿಂದ ಹಿಡಿದು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದವರೆಗೆ ಜನಾಂದೋಲನವನ್ನು ವಿಸ್ತರಿಸಲಾಗುವುದು. ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಯುವಜನರನ್ನು ಒಗ್ಗೂಡಿಸಿಕೊಂಡು ಹೋರಾಟವನ್ನು ತೀವ್ರಗೊಳಿಸಲು ಸಭೆಯಲ್ಲಿದ್ದ ನಾಯಕರು ಅಭಿಪ್ರಾಯಪಟ್ಟರು.
ಈ ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್, ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಕೆ. ಪ್ರಕಾಶ್, ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್, ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಮಂಜಪ್ಪ ಯಾದವ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ವಿವಿಧ ಮಿತ್ರಪಕ್ಷಗಳ ಪ್ರಮುಖ ನಾಯಕರು ಭಾಗವಹಿಸಿದ್ದರು.




