ಚಂದ್ರವಳ್ಳಿ ನ್ಯೂಸ್, ಕುಣಿಗಲ್:
ತುಮಕೂರು ಜಿಲ್ಲೆಯ ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಬೂತ್ ಮಟ್ಟದ ಏಜೆಂಟ್‌ಗಳ ಮಹತ್ವದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಕ್ಷೇತ್ರದಲ್ಲಿ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಈ ಸಭೆಯಲ್ಲಿ ಪ್ರಮುಖವಾಗಿ ಮತದಾರರ ಪಟ್ಟಿಯ ಪರಿಷ್ಕರಣೆ, ಬೂತ್ ಮಟ್ಟದ ಕಾರ್ಯಕರ್ತರ ಸಂಘಟನೆ, ಪಕ್ಷದ ಬಲವರ್ಧನೆ ಹಾಗೂ ಮುಂಬರುವ ಚುನಾವಣಾ ಸಿದ್ಧತೆಗಳ ಕುರಿತು ವಿಸ್ತೃತವಾಗಿ ಚರ್ಚಿಸಿ, ಏಜೆಂಟ್‌ಗಳಿಗೆ ಅಗತ್ಯ ಮಾರ್ಗದರ್ಶನ ನೀಡಲಾಯಿತು.
ಹಿರಿಯ ನಾಯಕರ ಉಪಸ್ಥಿತಿ - ಯಶಸ್ವಿ ಕಾರ್ಯಕ್ರಮ:
ಜೆಡಿಎಸ್ ಪಕ್ಷದ ಈ ಮಹತ್ವದ ಕಾರ್ಯಾಗಾರವನ್ನು ಯಶಸ್ವಿಗೊಳಿಸುವಲ್ಲಿ ಮಾಜಿ ಸಚಿವರು ಹಾಗೂ ಪಕ್ಷದ ಹಿರಿಯ ನಾಯಕರಾದ ಡಿ. ನಾಗರಾಜಯ್ಯ ಅವರು ಪ್ರಮುಖ ಪಾತ್ರ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖಂಡರಾದ ಡಾ. ರವಿ ನಾಗರಾಜಯ್ಯ, ಜಗದೀಶ್ ನಾಗರಾಜಯ್ಯ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶ್ರೀ ಹೆಚ್.ಎನ್. ದೇವರಾಜ್ ಅವರು ಉಪಸ್ಥಿತರಿದ್ದು, ಬೂತ್ ಮಟ್ಟದ ಏಜೆಂಟ್‌ಗಳಿಗೆ ಮತದಾರರ ಪಟ್ಟಿ ಪರಿಷ್ಕರಣೆಯ ತಾಂತ್ರಿಕತೆ ಹಾಗೂ ಎಚ್ಚರ ವಹಿಸಬೇಕಾದ ಅಂಶಗಳ ಕುರಿತು ಸೂಕ್ತ ಮಾಹಿತಿ ನೀಡಿದರು.
ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ಎಲ್ಲಾ ಹಿರಿಯ ನಾಯಕರಿಗೆ, ಮುಖಂಡರಿಗೆ, ಪದಾಧಿಕಾರಿಗಳಿಗೆ ಹಾಗೂ ಸಭೆಯಲ್ಲಿ ಭಾಗವಹಿಸಿ ಬೂತ್ ಮಟ್ಟದ ಜವಾಬ್ದಾರಿ ವಹಿಸಿಕೊಂಡ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಬಂಧುಗಳಿಗೆ ಜೆಡಿಎಸ್ ಪಕ್ಷದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.



