ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರೈತರ ತೀವ್ರ ವಿರೋಧದ ನಡುವೆಯೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ತಂದು 15,000 ಕೋಟಿಗೂ ಅಧಿಕ ಲಾಭ ಮಾಡಿಕೊಳ್ಳಲು ಕಾಂಗ್ರೆಸ್ ಸರ್ಕಾರ ಹುನ್ನಾರ ನಡೆಸುತ್ತಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ನಗರದ ಫ್ರೀಡಂ ಪಾರ್ಕ್‌ನಲ್ಲಿ ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ಬಹಿರಂಗ ಸಭೆ ಹಾಗೂ 'ವಿಧಾನಸೌಧ ಚಲೋ' ಕಾರ್ಯಕ್ರಮವನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಗಡಿ ಮಾಜಿ ಶಾಸಕ ಎ. ಮಂಜುನಾಥ್ ಅವರೊಂದಿಗೆ ಉದ್ಘಾಟಿಸಿ ಅವರು ಮಾತನಾಡಿದರು.
526 ದಿನಗಳ ನಿರಂತರ ಹೋರಾಟ: ಕಳೆದೆರಡು ವರ್ಷಗಳಿಂದ ಭೂಮಿ ಉಳಿಸಿಕೊಳ್ಳಲು ಸತತ 526 ದಿನಗಳಿಂದ ಹೋರಾಟ ನಡೆಸುತ್ತಿರುವ ಬಿಡದಿ ಭಾಗದ ರೈತರ ತ್ಯಾಗ ಮತ್ತು ಸತ್ಯಾಗ್ರಹಕ್ಕೆ ನಿಖಿಲ್ ಕುಮಾರಸ್ವಾಮಿ ಶ್ಲಾಘನೆ ವ್ಯಕ್ತಪಡಿಸಿದರು.
ಅಧಿಸೂಚನೆ ಕುರಿತು ಸ್ಪಷ್ಟನೆ: ಈ ಯೋಜನೆಗೆ ಹೆಚ್.ಡಿ. ಕುಮಾರಸ್ವಾಮಿ ಅವರ ಆಡಳಿತಾವಧಿಯಲ್ಲಿ ಯಾವುದೇ ಅಧಿಕೃತ ಅಧಿಸೂಚನೆ ಹೊರಡಿಸಿಲ್ಲ. ಪ್ರಸ್ತುತ ಕಾಂಗ್ರೆಸ್ ಸರ್ಕಾರವೇ ಎಲ್ಲ ಹಂತದ ನೋಟಿಫಿಕೇಶನ್ ಮಾಡಿ ರೈತರ ದಾರಿ ತಪ್ಪಿಸುತ್ತಿದೆ ಎಂದು ಸ್ಪಷ್ಟಪಡಿಸಿದರು.
ವಿಧಾನಸೌಧ ಚಲೋ: ಸಭೆಯ ನಂತರ ನಿಯೋಗದೊಂದಿಗೆ ತೆರಳಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಯೋಜನೆ ಕೈಬಿಡುವಂತೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.
ಅಂತಿಮ ಜಯದವರೆಗೆ ಹೋರಾಟ: 'ನಮ್ಮ ಭೂಮಿ - ನಮ್ಮ ಹಕ್ಕು' ಘೋಷಣೆಯಡಿ ಬಿಡದಿ ರೈತರಿಗೆ ನ್ಯಾಯ ಸಿಗುವವರೆಗೆ ಪಕ್ಷವು ಅವರ ಬೆನ್ನಿಗೆ ನಿಲ್ಲಲಿದೆ ಎಂದು ಅಭಯ ನೀಡಿದರು.
ಈ ಬೃಹತ್ ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವರು, ಹಾಲಿ ಹಾಗೂ ಮಾಜಿ ಶಾಸಕರು, ಸಂಸದರು, ಜೆಡಿಎಸ್ ಜಿಲ್ಲಾಧ್ಯಕ್ಷರು, ರೈತ ಮೋರ್ಚಾ ಮುಖಂಡರು ಮತ್ತು ಸಾವಿರಾರು ಸಂಖ್ಯೆಯ ರೈತರು ಉಪಸ್ಥಿತರಿದ್ದರು.



