ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತಮ್ಮ ಕೃತಿಗಳು ಮತ್ತು ಕೀರ್ತನೆಗಳ ಮೂಲಕ ಸಮಾಜದ ಅಂಕು-ಡೊಂಕುಗಳನ್ನು ತಿದ್ದಿ, ಭಕ್ತಿ ಪಥ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶ ಸಾರಿದ ದಾಸಶ್ರೇಷ್ಠ ಶ್ರೀ ಕನಕದಾಸರ ಆದರ್ಶಗಳು ಸಮಗ್ರ ಮಾನವ ಕುಲಕ್ಕೆ ಬೆಳಕಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಭಿಪ್ರಾಯಪಟ್ಟರು.
ಬೆಂಗಳೂರಿನ ಪಕ್ಷದ ರಾಜ್ಯ ಕಾರ್ಯಾಲಯ 'ಜಗನ್ನಾಥ ಭವನ'ದಲ್ಲಿ ಆಯೋಜಿಸಲಾಗಿದ್ದ ಮಹಾನ್ ದಾರ್ಶನಿಕ ಶ್ರೀ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಕನಕದಾಸರಿಗೆ ಭಕ್ತಿಪೂರ್ವಕ ನಮನಗಳನ್ನು ಸಲ್ಲಿಸಿದ ಅವರು, ಸಮಾಜಕ್ಕೆ ಕನಕದಾಸರು ನೀಡಿದ ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತವಾಗಿದೆ ಎಂದು ಸ್ಮರಿಸಿದರು.
ಈ ಸಂದರ್ಭದಲ್ಲಿ ಶಾಸಕ ಸಿದ್ದು ಸವದಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ್, ವಿಪ ಸದಸ್ಯ ಹಾಗೂ ರಾಜ್ಯ ಒಬಿಸಿ ಮೋರ್ಚಾ ಅಧ್ಯಕ್ಷ ರಘು ಕೌಟಿಲ್ಯ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ, ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷ ಸಪ್ತಗಿರಿಗೌಡ, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಹರೀಶ್ ಸೇರಿದಂತೆ ಪಕ್ಷದ ಹಲವಾರು ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.




