ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಉದ್ಯೋಗಾಕಾಂಕ್ಷಿಗಳ ಭವಿಷ್ಯದ ಜೊತೆ ಕಾಂಗ್ರೆಸ್ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿ, ಉದ್ಯೋಗಾಕಾಂಕ್ಷಿಗಳು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ಬಿಜೆಪಿ ಪೂರ್ಣ ಬೆಂಬಲ ವ್ಯಕ್ತಪಡಿಸಿದೆ.
ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಯುವಕರ ಹೋರಾಟದಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
350 ಕೋಟಿ ರೂ. ಲಂಚದ ಆರೋಪ: KPSC ಯ 400 ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಬರೋಬರಿ 350 ಕೋಟಿ ರೂಪಾಯಿಗೂ ಅಧಿಕ ಹಣದ ವಹಿವಾಟು ನಡೆದಿರುವ ಗಂಭೀರ ಆರೋಪಗಳಿದ್ದು, ಅರ್ಹ ಅಭ್ಯರ್ಥಿಗಳಿಗೆ ತೀವ್ರ ಅನ್ಯಾಯವಾಗಿದೆ ಎಂದು ವಿಜಯೇಂದ್ರ ಕಿಡಿಕಾರಿದರು.
ಖಾಲಿ ಹುದ್ದೆಗಳ ಭರ್ತಿಗೆ ನಿರ್ಲಕ್ಷ್ಯ: ರಾಜ್ಯದಲ್ಲಿ 2.5 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿಯಿದ್ದರೂ ಭರ್ತಿ ಮಾಡುತ್ತಿಲ್ಲ. ಕಳೆದ 15-20 ವರ್ಷಗಳಿಂದ ಶಿಕ್ಷಕರ ಸರಿಯಾದ ನೇಮಕಾತಿಯನ್ನೂ ನಡೆಸದೆ ಯುವಜನರ ಬದುಕನ್ನು ಕತ್ತಲಿಗೆ ತಳ್ಳಲಾಗಿದೆ.
CBI ತನಿಖೆಗೆ ಆಗ್ರಹ: KPSC ಹಾಗೂ KEA ಯಲ್ಲಿ ನಡೆಯುತ್ತಿರುವ ನೇಮಕಾತಿ ಅಕ್ರಮಗಳನ್ನು ತಕ್ಷಣವೇ CBI ತನಿಖೆಗೆ ವಹಿಸಬೇಕು ಎಂದು ಅವರು ಒತ್ತಾಯಿಸಿದರು.
UPSC ಮಾದರಿ ವ್ಯವಸ್ಥೆಗೆ ಸವಾಲು: ರಾಜ್ಯದಲ್ಲೂ UPSC ಮಾದರಿಯಲ್ಲಿ ಸಂಪೂರ್ಣ ಪಾರದರ್ಶಕ ಮತ್ತು ತಂತ್ರಜ್ಞಾನ ಆಧಾರಿತ ನೇಮಕಾತಿ ವ್ಯವಸ್ಥೆಯನ್ನು ಜಾರಿಗೆ ತರಬೇಕು.
ಸದನದ ಒಳಗೂ-ಹೊರಗೂ ಹೋರಾಟ: "ನಮ್ಮ ಯುವಕರಿಗೆ ಬೇಕಿರುವುದು ಪೊಳ್ಳು ಭರವಸೆಗಳು ಹಾಗೂ ಸುಳ್ಳು ಗ್ಯಾರಂಟಿಗಳಲ್ಲ, ಬದಲಾಗಿ ಅರ್ಹ ಅವಕಾಶಗಳು ಮತ್ತು ನ್ಯಾಯ!" ಪ್ರತಿಯೊಬ್ಬ ಅಭ್ಯರ್ಥಿಗೂ ನ್ಯಾಯ ಸಿಗುವವರೆಗೆ ಬಿಜೆಪಿ ಸದನದ ಒಳಗೂ ಹಾಗೂ ಹೊರಗೂ ತನ್ನ ಹೋರಾಟವನ್ನು ಮುಂದುವರಿಸಲಿದೆ ಎಂದು ಅವರು ಎಚ್ಚರಿಸಿದರು.
ಈ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಸೇರಿದಂತೆ ಹಲವು ಪ್ರಮುಖ ನಾಯಕರು ಹಾಗೂ ಸಾವಿರಾರು ಯುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು.



