ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುವ ಬಿಡದಿ ಟೌನ್‌ಶಿಪ್ ಯೋಜನೆಯನ್ನು ತೀವ್ರವಾಗಿ ವಿರೋಧಿಸಿ, ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಬೃಹತ್ ಪಾದಯಾತ್ರೆಗೆ ಚಾಲನೆ ದೊರೆಯಿತು.
ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕರಾದ ಆರ್. ಅಶೋಕ್ ಅವರು ಜಂಟಿಯಾಗಿ ಧ್ವಜ ಬೀಸುವ ಮೂಲಕ ಈ ಐತಿಹಾಸಿಕ ಪಾದಯಾತ್ರೆಗೆ ಚಾಲನೆ ನೀಡಿದರು. ರೈತರ ಹಿತರಕ್ಷಣೆಗಾಗಿ ಹಮ್ಮಿಕೊಂಡಿರುವ ಈ ಹೋರಾಟಕ್ಕೆ ಬಿಜೆಪಿ ಮತ್ತು ಜೆಡಿಎಸ್‌ನ ಹಲವು ನಾಯಕರು ಸಾಥ್ ನೀಡಿದ್ದಾರೆ.
ಈ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸಿ.ಬಿ. ಸುರೇಶ್ ಬಾಬು, ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎ. ಮಂಜುನಾಥ್, ಹಿರಿಯೂರಿನ ಪ್ರಮುಖ ಜೆಡಿಎಸ್ ಮುಖಂಡರಾದ ಎಂ. ರವೀಂದ್ರಪ್ಪ ಹಾಗೂ ಶ್ರೀಮತಿ ಲತಾ ರವೀಂದ್ರಪ್ಪ, ಜಿಲ್ಲಾಧ್ಯಕ್ಷ ಕೆ. ಮಂಜುನಾಥ್, ತಾಲೂಕು ಅಧ್ಯಕ್ಷ ಹನುಮಂತರಾಯಪ್ಪ, ಮುಖಂಡರಾದ ಕೂಡಲಹಳ್ಳಿ ಗೋವಿಂದಪ್ಪ, ಯುವ ಮುಖಂಡ ಚೇತನ್ ಭಾಗವಹಿಸಿದ್ದರು.
ಇದರೊಂದಿಗೆ ವಿವಿಧ ಹಾಲಿ ಹಾಗೂ ಮಾಜಿ ಶಾಸಕರು, ಪಕ್ಷದ ಹಿರಿಯ ನಾಯಕರು, ಸಾವಿರಾರು ಕಾರ್ಯಕರ್ತರು ಮತ್ತು ಬಿಡದಿ ಭಾಗದ ನೂರಾರು ರೈತ ಬಾಂಧವರು ಬೃಹತ್ ಸಂಖ್ಯೆಯಲ್ಲಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.



