ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
‘ನಾನು ಮಾಡಿದ್ದು, ನಾನು ಮಾಡಿದ್ದು’ ಎನ್ನುವುದಕ್ಕಿಂತ ‘ನಾವು ಮಾಡಿದ್ದು’ ಎಂಬ ಮನೋಭಾವ ಬೆಳೆಸಿಕೊಳ್ಳಬೇಕು. ಜನರ ಆಶೀರ್ವಾದದಿಂದಲೇ ಜನಪ್ರತಿನಿಧಿಗಳು ಅಧಿಕಾರಕ್ಕೆ ಬರುತ್ತಾರೆ. ಅಭಿವೃದ್ಧಿ ಕಾರ್ಯಗಳಿಗೆ ವೈಯಕ್ತಿಕ ಹಕ್ಕು ಸಾಧಿಸುವ ಬದಲು ಎಲ್ಲರ ಸಹಕಾರವನ್ನು ಗುರುತಿಸಬೇಕು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು.
ಬೆಳವಾಡಿ ಕೆರೆಗೆ ಗುರುವಾರ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ತಮ್ಮಯ್ಯ, ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಮಾತ್ರ ದೊಡ್ಡ ದೊಡ್ಡ ಹೇಳಿಕೆಗಳನ್ನು ನೀಡುವುದರಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಟೀಕಿಸಿದರು.
ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ‘ಹುಲಿ’ಗಳಂತೆ ಕಾಣಿಸಿಕೊಳ್ಳುತ್ತಿದ್ದಾರೆ. ಜನರ ನಡುವೆ ನಿಜವಾದ ಕೆಲಸ ಮಾಡುವುದೇ ಮುಖ್ಯ. ಕೇವಲ ಫೋಟೋ, ಪ್ರಚಾರ ಮತ್ತು ಹೇಳಿಕೆಗಳಿಂದ ಜನರ ಸಮಸ್ಯೆಗಳು ಬಗೆಹರಿಯುವುದಿಲ್ಲ ಎಂದು ಅವರು ವ್ಯಂಗ್ಯವಾಡಿದರು.
ಸಮಾನತೆ ಮತ್ತು ಶೋಷಿತ ವರ್ಗಗಳ ಪರವಾಗಿ ಧ್ವನಿ ಎತ್ತಿದ ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಕನಕದಾಸರ ವಿಚಾರಧಾರೆಗಳನ್ನು ಆಡಳಿತದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.
ಜಾತಿ, ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುವ ಬದಲು ಎಲ್ಲ ಸಮುದಾಯಗಳನ್ನೂ ಒಗ್ಗೂಡಿಸಿಕೊಂಡು ಸಾಗಬೇಕಾಗಿದೆ. ಭಾರತ ಜಾತ್ಯತೀತ ರಾಷ್ಟ್ರವಾಗಿದ್ದು, ಕಾಂಗ್ರೆಸ್ ಪಕ್ಷ ಸರ್ವ ಜಾತಿ, ಸರ್ವ ಧರ್ಮದ ಜನರನ್ನು ಒಳಗೊಂಡು ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಬಸವಣ್ಣನವರ ವಚನಗಳನ್ನು ಉಲ್ಲೇಖಿಸಿದ ಅವರು, ವ್ಯಕ್ತಿ ತನ್ನನ್ನು ತಾನೇ ಹೊಗಳಿಕೊಳ್ಳುವುದಕ್ಕಿಂತ ಮಾಡಿದ ಕೆಲಸವೇ ಮಾತನಾಡಬೇಕು ಎಂಬ ಸಂದೇಶವನ್ನು ಜನಪ್ರತಿನಿಧಿಗಳು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.
ಚಿಕ್ಕಮಗಳೂರು ಕ್ಷೇತ್ರದಲ್ಲಿ ಹಿಂದಿನ ಅವಧಿಯಲ್ಲಿ ಹಲವು ಕಾಮಗಾರಿಗಳಿಗೆ ಅನುದಾನ ತಂದಿರುವುದಾಗಿ ಹೇಳಿಕೊಳ್ಳುವ ವಿರೋಧ ಪಕ್ಷದ ನಾಯಕರ ವಿರುದ್ಧವೂ ತಮ್ಮಯ್ಯ ಟೀಕೆ ಮಾಡಿದರು.
ಅನುದಾನ ತಂದಿದ್ದರೆ ಅದರ ಪ್ರಯೋಜನ ಜನರಿಗೆ ಎಷ್ಟರ ಮಟ್ಟಿಗೆ ತಲುಪಿದೆ ಎಂಬುದನ್ನು ಜನರ ಮುಂದೆ ಹೇಳಬೇಕು. ಕೇವಲ ಯೋಜನೆಗಳ ಘೋಷಣೆ ಅಥವಾ ಉದ್ಘಾಟನೆಗಳ ಫೋಟೋಗಳನ್ನು ತೋರಿಸುವುದರಿಂದ ಅಭಿವೃದ್ಧಿ ಸಾಬೀತಾಗುವುದಿಲ್ಲ ಎಂದು ಹೇಳಿದರು.
ತಮ್ಮ ಅಧಿಕಾರಾವಧಿಯಲ್ಲಿ ಜನರಿಗೆ ನೇರವಾಗಿ ಪ್ರಯೋಜನವಾಗುವ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುವುದು. ವಿಶೇಷವಾಗಿ ಚಿಕ್ಕಮಗಳೂರಿಗೆ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸುವುದು ಹಾಗೂ ಬಡವರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಜವಳಿ ಪಾರ್ಕ್ ಸ್ಥಾಪಿಸುವ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.




