ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ಸಾರ್ವಜನಿಕ ಕೆಲಸಗಳಿಗೆ ಲಂಚಕ್ಕೆ ಬೇಡಿಕೆ ಹಾಗೂ ಮಧ್ಯವರ್ತಿಗಳ ಹಾವಳಿ ಹೆಚ್ಚಿರುವ ಆರೋಪಗಳ ಹಿನ್ನೆಲೆಯಲ್ಲಿ, ಬಳ್ಳಾರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (ಆರ್ಟಿಒ) ಕಚೇರಿಯ ಮೇಲೆ ಗುರುವಾರ ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿದೆ.
ಬೆಂಗಳೂರು ಲೋಕಾಯುಕ್ತ ಡಿವೈಎಸ್ಪಿ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಆಗಮಿಸಿದ ಸುಮಾರು 15 ಅಧಿಕಾರಿಗಳ ತಂಡವು ಬೆಳಿಗ್ಗೆ 11 ಗಂಟೆಯಿಂದ ಶೋಧ ಕಾರ್ಯ ಆರಂಭಿಸಿತು. ಕಚೇರಿಯ ವಿವಿಧ ವಿಭಾಗಗಳಲ್ಲಿದ್ದ ಪ್ರಮುಖ ಕಡತಗಳು, ದಾಖಲೆಗಳು ಹಾಗೂ ಆಡಳಿತಾತ್ಮಕ ವ್ಯವಹಾರಗಳನ್ನು ಅಧಿಕಾರಿಗಳು ಕೂಲಂಕಷವಾಗಿ ತನಿಖೆಗೆ ಒಳಪಡಿಸಿದರು.
ದಾಳಿಯ ವೇಳೆ ಆರ್ಟಿಒ ನಿಜಾಮುದ್ದೀನ್, ಎಆರ್ಟಿಒ ರಫೀಕ್ ಹಾಗೂ ಸಂತೋಷ್ ಕೊಂಪಿ ಸೇರಿದಂತೆ ಹಲವು ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಲೋಕಾಯುಕ್ತ ತಂಡ ಸುದೀರ್ಘ ವಿಚಾರಣೆಗೆ ಒಳಪಡಿಸಿ ಮಾಹಿತಿ ಸಂಗ್ರಹಿಸಿದೆ. ಆರ್ಟಿಒ ಕಚೇರಿಯಲ್ಲಿ ಹಣ ನೀಡದೆ ಅಥವಾ ಮಧ್ಯವರ್ತಿಗಳಿಲ್ಲದೆ ಯಾವುದೇ ಕಡತಗಳು ವಿಲೇವಾರಿಯಾಗುತ್ತಿಲ್ಲ ಎಂಬ ಸಾರ್ವಜನಿಕರ ದೂರು ಆಧರಿಸಿ ಈ ಕಾರ್ಯಾಚರಣೆ ನಡೆಸಲಾಗಿದೆ.




