ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಸಹಕಾರಿ ಆಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಟಿ.ಸಿ.ಸುದೀಪ ತಿಳಿಸಿದರು.
ನಗರದ ಶ್ರೀ ಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಸಾಂಸ್ಕೃತಿಕ ಸ್ಪರ್ಧೆಗಳನ್ನು ಸ್ಪರ್ಧಾ ಮನೋಭಾವದಿಂದ ನೋಡಬೇಕು. ಕಲೆ ಮತ್ತು ಕಲಾ ಪ್ರಕಾರಗಳು ವಿದ್ಯಾರ್ಥಿಗಳ ಬದುಕನ್ನು ಕಟ್ಟಿಕೊಳ್ಳಲು ಸಹಕಾರಿ ಆಗಲಿದೆ. ಯುವಜನತೆ ಮೊಬೈಲ್ ವ್ಯಾಮೋಹ ಬಿಟ್ಟು, ಪುಸ್ತಕಗಳ ಓದಿನ ಕಡೆಗೆ ಗಮನ ಕೊಡಬೇಕು. ಪುಸ್ತಕ ಪ್ರೀತಿ ಪ್ರತಿಯೊಬ್ಬರ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿ ಆಗಲಿದೆ ಎಂದರು.
ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣವು ಜೀವನ ಮೌಲ್ಯವನ್ನು ರೂಪಿಸುವ ಮಹತ್ತರವಾದ ಘಟ್ಟವಾಗಿದೆ. ವಿದ್ಯಾರ್ಥಿಗಳು ಪದವಿಪೂರ್ವ ಹಂತದಲ್ಲಿ ಸತತ ಪರಿಶ್ರಮದಿಂದ ವ್ಯಾಸಂಗ ಮಾಡಬೇಕಾಗಿದೆ. ಪದವಿ ಪೂರ್ವ ಶಿಕ್ಷಣವನ್ನು ಸಮರ್ಪಕವಾಗಿ ಮಾಡಿದರೆ ಅದು ಉನ್ನತ ಮಟ್ಟದ ವ್ಯಾಸಂಗಕ್ಕೆ ಅನುಕೂಲಕರವಾಗಲಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಭೆಗೆ ಮನ್ನಣೆ ಇರುತ್ತದೆ ಎಂಬುದನ್ನು ವಿದ್ಯಾರ್ಥಿಗಳು ಮರೆಯಬಾರದು ಎಂದರು.
ಕಾರ್ಯಕ್ರಮದಲ್ಲಿ ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ವಿದ್ಯಾಸಂಸ್ಥೆಯ ಅಧ್ಯಕ್ಷ ಎ.ರಾಮಶೆಟ್ಟಿ, ಗೌರವ ಕಾರ್ಯದರ್ಶಿ ಎಸ್.ಪ್ರಕಾಶ್, ಖಜಾಂಚಿ ಸಿ.ಎಸ್.ಜಗದೀಶ್, ನಿರ್ದೇಶಕರುಗಳಾದ ಕೃಷ್ಣಮೂರ್ತಿ, ಜೆ.ಬಿ.ಮಹೇಶ್, ರಮೇಶ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷೆ ಪಿ.ತ್ರಿವೇಣಿ, ಕಾರ್ಯದರ್ಶಿ ಜಿ. ಬೈರೆಡ್ಡಿ, ಖಜಾಂಚಿ ಡಿ.ಎಸ್.ಸುನೀತಾ, ಸಾಂಸ್ಕೃತಿಕ ಕಾರ್ಯದರ್ಶಿ ಎನ್.ಶ್ರೀನಿವಾಸ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.




