ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಉತ್ತರ ತಾಲೂಕಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಪ್ಪನಹಳ್ಳಿ ಗ್ರಾಮದ ಖಾಸಗಿ ಲೇಔಟ್ನಲ್ಲಿ ಕಾರಿನೊಳಗೆ ಗುಂಡು ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮೃತರನ್ನು ಇಮ್ರಾನ್ ಪಾಷಾ (45) ಎಂದು ಗುರುತಿಸಲಾಗಿದೆ.
ಲೇಔಟ್ನ ನಿರ್ಜನ ಪ್ರದೇಶದಲ್ಲಿ ನಿಂತಿದ್ದ ಕಾರಿನ ಮುಂಭಾಗದ ಸೀಟಿನಲ್ಲಿ ಇಮ್ರಾನ್ ಅವರ ಮೃತದೇಹ ಪತ್ತೆಯಾಗಿದ್ದು, ಪಕ್ಕದಲ್ಲೇ ಬುಲೆಟ್ ಕೂಡ ಬಿದ್ದಿರುವುದು ಕಂಡುಬಂದಿದೆ. ವಿಷಯ ತಿಳಿದ ತಕ್ಷಣ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಬಾಗಲೂರು ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಮೇಲ್ನೋಟಕ್ಕೆ ಇದು ಗುಂಡು ಹಾರಿಸಿಕೊಂಡು ಮಾಡಿಕೊಂಡ ಆತ್ಮಹತ್ಯೆಯಂತೆ ಕಂಡುಬಂದರೂ, ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಸಾಧ್ಯತೆಯನ್ನೂ ಪೊಲೀಸರು ತಳ್ಳಿಹಾಕಿಲ್ಲ. ಈ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಕಟ್ಟಡಗಳ ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಂಡು ಪರಿಶೀಲಿಸಲಾಗುತ್ತಿದ್ದು, ವೈಯಕ್ತಿಕ ದ್ವೇಷ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆಯನ್ನು ತೀವ್ರಗೊಳಿಸಲಾಗಿದೆ.




