ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಐಷಾರಾಮಿ ಜೀವನ ನಡೆಸಲು ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ದೆಹಲಿಯಿಂದ ಮಾದಕ ವಸ್ತುಗಳನ್ನು ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಯಲಹಂಕ ನ್ಯೂಟೌನ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಇಮ್ರಾನ್ ಪಾಷಾ (28) ಮತ್ತು ಆಯಿಷಾ ಸಿದ್ದಿಕಿ (27) ಎಂದು ಗುರುತಿಸಲಾಗಿದೆ.
ಖಚಿತ ಮಾಹಿತಿಯ ಮೇರೆಗೆ ನವೆಂಬರ್ 22ರಂದು ಕೆಂಚೇನಹಳ್ಳಿಯಿಂದ ಹಾರೋಹಳ್ಳಿಗೆ ತೆರಳುವ ರಸ್ತೆಯ ಖಾಲಿ ನಿವೇಶನವೊಂದರ ಮೇಲೆ ದಾಳಿ ನಡೆಸಿದ ಪೊಲೀಸರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಈ ಜೋಡಿಯನ್ನು ಸೆರೆಹಿಡಿದಿದ್ದಾರೆ.
ಆರೋಪಿಗಳಿಂದ ಬರೋಬ್ಬರಿ 5 ಕೋಟಿ 72 ಲಕ್ಷ ಮೌಲ್ಯದ 5 ಕೆ.ಜಿ. 720 ಗ್ರಾಂ ತೂಕದ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಈ ಜಾಲದ ಹಿಂದಿರುವ ಇತರರ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಡ್ರಗ್ಸ್ ವಿರುದ್ಧ ಒಗ್ಗಟ್ಟಿನ ಹೋರಾಟಕ್ಕೆ ಕರೆ: ಮತ್ತೊಂದೆಡೆ, ಇತ್ತೀಚೆಗೆ ವಿಧಾನಸೌಧದ ಮುಂಭಾಗ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ, ಮಾದಕ ದ್ರವ್ಯಗಳ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ ಎಂದಿದ್ದರು. ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಡ್ರಗ್ಸ್ ದಂಧೆಗೆ ಸಂಬಂಧಿಸಿದಂತೆ 37 ಸಾವಿರ ಮಂದಿಯನ್ನು ಬಂಧಿಸಲಾಗಿದ್ದು, 10 ಸಾವಿರ ಆರೋಪಿಗಳಿಗೆ ಶಿಕ್ಷೆಯಾಗಿದೆ ಎಂದು ಮಾಹಿತಿ ನೀಡಿದ್ದ ಅವರು, ಯುವಜನತೆಯ ಭವಿಷ್ಯ ರಕ್ಷಿಸಲು ಎಲ್ಲಾ ರಾಜ್ಯಗಳು ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಕರೆ ನೀಡಿದ್ದರು.




