ಚಂದ್ರವಳ್ಳಿ ನ್ಯೂಸ್, ರಾಮನಗರ (ಮಾಗಡಿ):
ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಕರ್ನಾಟಕ ಪಬ್ಲಿಕ್ ಶಾಲೆ (KPS) ಆವರಣದಲ್ಲಿ ಬುಧವಾರ ತಡರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಶಾಲೆಯ ಕೊಠಡಿಯೊಂದು ಬೆಂಕಿಗಾಹುತಿಯಾಗಿದೆ.
ಅಗ್ನಿ ಅವಘಡದಲ್ಲಿ ಶಾಲಾ ಕೊಠಡಿಯಲ್ಲಿದ್ದ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಪೀಠೋಪಕರಣಗಳು ಹಾಗೂ ಪ್ರಮುಖ ಕಲಿಕಾ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಶಾಲೆಯ ನೂತನ ಕಟ್ಟಡ ನಿರ್ಮಾಣಗೊಂಡ ನಂತರ ಈ ಹಳೆಯ ಕೊಠಡಿಯನ್ನು ಖಾಲಿ ಬಿಡಲಾಗಿತ್ತು ಎಂದು ತಿಳಿದುಬಂದಿದೆ.
ಘಟನೆಯ ವಿವರ: ಬುಧವಾರ ತಡರಾತ್ರಿ ಹಳೆಯ ಕೊಠಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಕೊಠಡಿಗೆ ಆವರಿಸಿದೆ. ಬೆಂಕಿಯ ಜ್ವಾಲೆಯನ್ನು ಕಂಡ ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸತತ ಪರಿಶ್ರಮ ವಹಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಪಕ್ಕದ ಕೊಠಡಿಗಳಿಗೆ ಬೆಂಕಿ ಹರಡುವುದು ತಪ್ಪಿದೆ.
ಕಿಡಿಗೇಡಿಗಳ ಕೃತ್ಯವೇ ಎಂಬ ಅನುಮಾನ: ಖಾಲಿ ಇದ್ದ ಕೊಠಡಿಯಲ್ಲಿ ತಡರಾತ್ರಿ ಬೆಂಕಿ ಹೊತ್ತಿಕೊಂಡಿರುವುದರಿಂದ ಇದು ಆಕಸ್ಮಿಕವಾಗಿ ಸಂಭವಿಸಿದ ದುರಂತವೇ ಅಥವಾ ಯಾರಾದರೂ ಕಿಡಿಗೇಡಿಗಳು ನಡೆಸಿದ ಕೃತ್ಯವೇ ಎಂಬ ತೀವ್ರ ಅನುಮಾನಗಳು ವ್ಯಕ್ತವಾಗಿವೆ.
ಈ ಕುರಿತು ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಗ್ನಿ ಅವಘಡಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.




