ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಯೋಜನಾ ಹಾಗೂ ಸಾಂಖ್ಯಿಕ ಸಚಿವ ಡಿ.ಸುಧಾಕರ್ ಅವರು ಅನಾರೋಗ್ಯದ ಕಾರಣ ಬೆಂಗಳೂರಿನ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಆಸ್ಪತ್ರೆಗೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್ ಅವರು, ಸಚಿವ ಸುಧಾಕರ್ ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆಯ ಕುರಿತು ವೈದ್ಯರಿಂದ ಸಮಗ್ರ ಮಾಹಿತಿ ಪಡೆದರು. ಬಳಿಕ ಆಸ್ಪತ್ರೆಯಲ್ಲಿದ್ದ ಸುಧಾಕರ್ ಅವರ ಕುಟುಂಬಸ್ಥರೊಂದಿಗೆ ಮಾತನಾಡಿ, ಅವರಿಗೆ ಧೈರ್ಯ ತುಂಬಿದರು.
ಶೀಘ್ರ ಗುಣಮುಖರಾಗಲಿ ಎಂದು ಹಾರೈಕೆ:
ಭೇಟಿಯ ನಂತರ ಮಾತನಾಡಿದ ಉಪಮುಖ್ಯಮಂತ್ರಿಗಳು, "ಸಚಿವ ಡಿ.ಸುಧಾಕರ್ ಅವರು ಶೀಘ್ರವಾಗಿ ಗುಣಮುಖರಾಗಲಿ. ಅವರು ಆದಷ್ಟು ಬೇಗ ಆಸ್ಪತ್ರೆಯಿಂದ ಬಿಡುಗಡೆಯಾಗಿ, ಎಂದಿನಂತೆ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ," ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಶುಭ ಹಾರೈಸಿದರು.
ಸಚಿವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಈ ಸಂದರ್ಭದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ಸಚಿವ ಸುಧಾಕರ್ ಪುತ್ರ, ಪ್ರಮುಖ ರಾಜಕೀಯ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.


