ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಆಘಾತ ಮತ್ತು ದುಃಖ ವ್ಯಕ್ತಪಡಿಸಿದ್ದಾರೆ.ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಸುಧಾಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದು, ಅವರ ಅಗಲಿಕೆಯು ರಾಜ್ಯ ರಾಜಕಾರಣಕ್ಕೆ ಮತ್ತು ವೈಯಕ್ತಿಕವಾಗಿ ತಮಗೆ ತುಂಬಲಾರದ ನಷ್ಟ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಅಭಿವೃದ್ಧಿ ಹರಿಕಾರನ ಅಗಲಿಕೆ-
ಡಿ. ಸುಧಾಕರ್ ಅವರೊಂದಿಗಿನ ಒಡನಾಟವನ್ನು ಸ್ಮರಿಸಿದ ಡಿ.ಕೆ. ಶಿವಕುಮಾರ್, "ಸುಧಾಕರ್ ಅವರು ಕೇವಲ ನನ್ನ ಸಂಪುಟ ಸಹೋದ್ಯೋಗಿ ಮಾತ್ರವಲ್ಲ, ನನ್ನ ಅತ್ಯಂತ ಆಪ್ತ ಸ್ನೇಹಿತರಾಗಿದ್ದರು. ಹಿರಿಯೂರು ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಅವರಿಗಿದ್ದ ತುಡಿತ ಅಪಾರವಾದುದು. ನನ್ನನ್ನು ಭೇಟಿ ಮಾಡಲು ಬಂದಾಗಲೆಲ್ಲಾ ಅವರು ಕ್ಷೇತ್ರದ ಜನರ ಕಲ್ಯಾಣಕ್ಕಾಗಿ ಅಥವಾ ಅಭಿವೃದ್ಧಿ ಕೆಲಸಗಳ ಬಗ್ಗೆ ಮನವಿ ಹಿಡಿದೇ ಬರುತ್ತಿದ್ದರು. ಇದು ಅವರ ಜನಪರ ಕಾಳಜಿಗೆ ಸಾಕ್ಷಿ," ಎಂದು ಬಣ್ಣಿಸಿದ್ದಾರೆ.
ಬಡವರ ಬಂಧು-
ಸಚಿವರಾಗಿ ಮತ್ತು ಶಾಸಕರಾಗಿ ಡಿ. ಸುಧಾಕರ್ ಅವರು ಜನಮಾನಸದಲ್ಲಿ 'ಬಡವರ ಬಂಧು' ಎಂದೇ ಗುರುತಿಸಿಕೊಂಡಿದ್ದರು. ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿಯಲ್ಲಿ ಅವರ ಪಾತ್ರ ದೊಡ್ಡದಾಗಿತ್ತು ಎಂದು ಹೇಳಿದ ಡಿ.ಕೆ. ಶಿವಕುಮಾರ್, "ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ," ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಾರ್ಥಿಸಿದ್ದಾರೆ.



