ಚಂದ್ರವಳ್ಳಿ ನ್ಯೂಸ್, ಮೈಸೂರು:
ಮೈಸೂರು ಅರಮನೆಯನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳಲು ಕಾರ್ಯಾಂಗವನ್ನು ದುರ್ಬಳಕೆ ಮಾಡಿಕೊಳ್ಳುವ ಪ್ರಯತ್ನಗಳು ನಡೆದಿವೆ; ಆದರೆ ನ್ಯಾಯಾಲಯದ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ. ಮೈಸೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ದಸರಾ ವೈಫಲ್ಯಗಳ ಚರ್ಚೆ ಅನಗತ್ಯ ಹಾಗೂ ಅರಮನೆ ಭದ್ರತೆಯನ್ನು ಹೊರಗಿನವರಿಗೆ ನೀಡಿದ್ದರಿಂದ ಜಟ್ಟಿ ಕಾಳಗಕ್ಕೆ ಅಡಚಣೆಯಾಗಿತ್ತು ಎಂದರು.
ಇದೇ ವೇಳೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರ ಗಮನ ಬೇರೆಡೆಗೆ ಸೆಳೆಯಲು ರಾಜ್ಯ ಸರ್ಕಾರ ಎಥೆನಾಲ್ ವಿಚಾರವನ್ನು ಮುನ್ನೆಲೆಗೆ ತಂದಿದೆ ಎಂದು ಆರೋಪಿಸಿದರು. ಎಥೆನಾಲ್ ಬಳಕೆಯಿಂದ ವಾಹನಗಳ ಕಾರ್ಯಕ್ಷಮತೆ ಹಾಳಾಗುತ್ತದೆ ಎಂಬುದಕ್ಕೆ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲ ಎಂದ ಅವರು, ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಿರ್ಮಿಸಲಾದ ದೇಶದ ಮೊದಲ ವಿಶಿಷ್ಟ ತಾರಾಲಯವನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಕಿಡಿಕಾರಿಕೆ: ಎಥೆನಾಲ್ ವಿವಾದಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದೇಶದ ಸಂಪನ್ಮೂಲ ಉಳಿತಾಯಕ್ಕಾಗಿ ಕೇಂದ್ರ ಸರ್ಕಾರ ಎಥೆನಾಲ್ ಮಿಶ್ರಣ ಪ್ರಮಾಣ ನಿರ್ಧರಿಸುತ್ತದೆ; ರಾಜ್ಯ ಸರ್ಕಾರವೇ ಮೊದಲು ತನ್ನ ತಪ್ಪನ್ನು ತಿದ್ದುಕೊಳ್ಳಲಿ ಎಂದು ಆರ್. ಅಶೋಕ್ ಚಾಟಿ ಬೀಸಿದ್ದಾರೆ. ಇನ್ನು ರಾಜ್ಯ ಸರ್ಕಾರ ಹೇಳಿದಷ್ಟು ಎಥೆನಾಲ್ ಬ್ಲೆಂಡಿಂಗ್ ಆಗಿಲ್ಲ ಎಂದು ಬಿಪಿಸಿಎಲ್ ಮತ್ತು ಐಒಸಿಎಲ್ ತೈಲ ಕಂಪನಿಗಳು ಸ್ಪಷ್ಟಪಡಿಸಿದ್ದು, ಯಾವುದೇ ಮರು ಪರೀಕ್ಷೆಗೂ ಸಿದ್ಧವೆಂದಿವೆ ಎಂದು ಬಿ.ವೈ. ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.




