ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವಿನ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಬೆಂಗಳೂರಿನ ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಂದ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಲ್ ನಡುವೆ ಹೊಸ ಎಕ್ಸ್‌ಪ್ರೆಸ್ ರೈಲು ಸೇವೆಗೆ ಚಾಲನೆ ನೀಡಲಾಗಿದೆ.
ಬೆಂಗಳೂರಿನ ಎಸ್‌ಎಂವಿಟಿ ರೈಲು ನಿಲ್ದಾಣದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿ, ಹೊಸ ರೈಲಿಗೆ ಹಸಿರು ನಿಶಾನೆ ತೋರಿದರು. ಈ ವೇಳೆ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಕಾರ್ಯಕ್ರಮದಲ್ಲಿ ಖುದ್ದಾಗಿ ಪಾಲ್ಗೊಂಡು ಚಾಲನೆ ನೀಡಿದರು.
ಪ್ರವಾಸೋದ್ಯಮ ಹಾಗೂ ಪ್ರಾದೇಶಿಕ ಬೆಳವಣಿಗೆಗೆ ಸಹಕಾರಿ:
ಈ ಹೊಸ ರೈಲು ಸೇವೆಯು ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವೆ ನೇರ ಸಂಪರ್ಕವನ್ನು ಕಲ್ಪಿಸಲಿದೆ. ದೂರದ ಪ್ರಯಾಣಿಕರಿಗೆ ಹೆಚ್ಚಿನ ಸೌಕರ್ಯ, ಕೈಗೆಟುಕುವ ದರ ಮತ್ತು ಸುಲಭ ಪ್ರವೇಶಸಾಧ್ಯತೆಯನ್ನು ಒದಗಿಸುವ ಮೂಲಕ ಈ ರೈಲು ಸಹಕಾರಿಯಾಗಲಿದೆ. ಅಲ್ಲದೆ, ಉಭಯ ರಾಜ್ಯಗಳ ನಡುವೆ ಪ್ರವಾಸೋದ್ಯಮ ಮತ್ತು ಪ್ರಾದೇಶಿಕ ಆರ್ಥಿಕ ಬೆಳವಣಿಗೆಗೆ ಇದು ಹೆಚ್ಚಿನ ಉತ್ತೇಜನ ನೀಡಲಿದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಕಾರ್ಯಕ್ರಮದಲ್ಲಿ ಪ್ರಮುಖ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯಸಭಾ ಸಂಸದ ಲೇಹರ್ ಸಿಂಗ್, ಸಂಸದ ಪಿ.ಸಿ. ಮೋಹನ್, ಸಂಸದ ತೇಜಸ್ವಿ ಸೂರ್ಯ, ರೈಲ್ವೆ ಮಹಾ ವ್ಯವಸ್ಥಾಪಕ ಅನಂತ್, ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಎ.ಕೆ. ಸಿಂಗ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಹೊಸ ರೈಲು ಸೇವೆಯು ಎರಡು ರಾಜ್ಯಗಳ ವಾಣಿಜ್ಯ ಮತ್ತು ಪ್ರಯಾಣಿಕರ ದಟ್ಟಣೆಯನ್ನು ಸುಲಭಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.



