ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರಿ ಆಶ್ರಯದಲ್ಲಿ ನವೆಂಬರ್ 9 ರಂದು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’ ಆಯೋಜಿಸಲು ಸಿದ್ಧತೆ ನಡೆಸಲಾಗಿದೆ ಎಂಬ ವರದಿಗಳು ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದವು.
ಇದಕ್ಕೆ ಪ್ರತಿಪಕ್ಷ ಬಿಜೆಪಿ ಹಾಗೂ ಕನ್ನಡಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿಗಳ ಕಚೇರಿಯು ಸ್ಪಷ್ಟನೆ ನೀಡಿದ್ದು, ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅಂತಹ ಯಾವುದೇ ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಎಂದು ತಿಳಿಸಿದೆ.
ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಯಾವುದೇ ಸರ್ಕಾರಿಯೇತರ ಅಥವಾ ಖಾಸಗಿ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ಗುರುವಾರ ಅಧಿಕೃತ ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದೆ. ಕೆಲವು ಮಾಧ್ಯಮಗಳಲ್ಲಿ ಖಾಸಗಿ ಅಥವಾ ಸರ್ಕಾರದ ವತಿಯಿಂದ ಇಂತಹ ಕಾರ್ಯಕ್ರಮ ನಡೆಯಲಿದೆ ಎಂದು ಬಿಂಬಿಸುತ್ತಿರುವುದು ಸಂಪೂರ್ಣ ಸತ್ಯಕ್ಕೆ ದೂರವಾದ ಮಾತಾಗಿದ್ದು, ಸರ್ಕಾರ ಅಂತಹ ಯಾವುದೇ ಅನುಮತಿಯನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಹಿನ್ನೆಲೆ ಏನು?ಎರಡು ದಿನಗಳ ಹಿಂದಷ್ಟೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ. ಖಾದರ್ ಅವರು, ನವೆಂಬರ್ 9ರಂದು ಉರ್ದು ದಿನದ ಅಂಗವಾಗಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’ ಆಯೋಜಿಸಲಾಗುವುದು ಎಂದು ಘೋಷಿಸಿದ್ದರು.
ಪುಸ್ತಕ ಮೇಳ, ಆಹಾರೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮುಶಾಯಿರಾ ಒಳಗೊಂಡ ಈ ಹಬ್ಬವನ್ನು ಆಯೋಜಿಸುವ ಪ್ರಸ್ತಾವನೆ ಇದೆ ಎಂದು ಅವರು ತಿಳಿಸಿದ್ದರು.
ವಿರೋಧ ವ್ಯಕ್ತಪಡಿಸಿದ್ದ ಬಿಜೆಪಿ ಮತ್ತು ಕರವೇ:ಸಚಿವರ ಈ ಘೋಷಣೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಬಿಜೆಪಿ ಹಿರಿಯ ಶಾಸಕ ಸುರೇಶ್ ಕುಮಾರ್, ಕನ್ನಡಿಗರ ಅನನ್ಯತೆಯ ಸಂಕೇತವಾಗಿರುವ ವಿಧಾನಸೌಧವನ್ನು ನಿರ್ದಿಷ್ಟ ಸಮುದಾಯದ ಮತಬ್ಯಾಂಕ್ ಓಲೈಕೆಗಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಈ ನಿರ್ಧಾರವನ್ನು ತಕ್ಷಣ ಹಿಂಪಡೆಯುವಂತೆ ಒತ್ತಾಯಿಸಿದ್ದರು.
ಇದರ ಬೆನ್ನಲ್ಲೇ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಸರ್ಕಾರದ ಈ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದವು.
ಸಾರ್ವಜನಿಕ ವಲಯದಲ್ಲಿ ಹಾಗೂ ರಾಜಕೀಯವಾಗಿ ವಿವಾದ ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತ ಸಿಎಂ ಕಚೇರಿಯು, ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ಆಯೋಜನೆಯ ವರದಿಗಳನ್ನು ಅಧಿಕೃತವಾಗಿ ತಳ್ಳಿಹಾಕಿದೆ.




