ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಶ್ಲೀಲ ದೃಶ್ಯಗಳ ಚಿತ್ರೀಕರಣ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕಡ್ಡಾಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಆದರೆ, ಮನೆಗೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಈಗಾಗಲೇ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವುದರಿಂದ ಅವರಿಗೆ ಜೈಲಿನಿಂದ ಬಿಡುಗಡೆಯಾಗುವ ಅವಕಾಶವಿಲ್ಲ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಮಹತ್ವದ ಆದೇಶ ಹೊರಡಿಸಿದೆ. ತನಿಖಾಧಿಕಾರಿಗಳು ನಿಗದಿತ ಗಡುವಿನೊಳಗೆ ಆರೋಪಪಟ್ಟಿ (ಚಾರ್ಜ್ಶೀಟ್) ಸಲ್ಲಿಸಲು ವಿಫಲರಾಗಿರುವುದರಿಂದ ಪ್ರಜ್ವಲ್ ಕಡ್ಡಾಯ ಜಾಮೀನು ಪಡೆಯಲು ಅರ್ಹರಾಗಿದ್ದಾರೆ ಎಂದು ಪೀಠ ಅಭಿಪ್ರಾಯಪಟ್ಟಿದೆ.
ಆದಾಗ್ಯೂ, ಮತ್ತೊಂದು ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶದಿಂದ ಅವರಿಗೆ ಯಾವುದೇ ಬಿಡುಗಡೆಯ ಲಾಭ ದೊರೆಯುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಪ್ರಕರಣದ ಹಿನ್ನೆಲೆ: 2024ರ ಲೋಕಸಭಾ ಚುನಾವಣೆಗೂ ಮುನ್ನ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಸಾವಿರಾರು ಅಶ್ಲೀಲ ವಿಡಿಯೋಗಳು ಪೆನ್ಡ್ರೈವ್ ಮೂಲಕ ಹರಿದಾಡಿ ರಾಜ್ಯ ರಾಜಕಾರಣದಲ್ಲಿ ಭಾರಿ ಕೋಲಾಹಲ ಎಬ್ಬಿಸಿದ್ದವು.
ಸಂತ್ರಸ್ತ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ಠಾಣೆಯಲ್ಲಿ ಮೊದಲ ಎಫ್ಐಆರ್ ದಾಖಲಾಗಿತ್ತು.ನಂತರ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದ್ದು, ಪ್ರಜ್ವಲ್ ವಿರುದ್ಧ ಒಟ್ಟು ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.
ಈ ಪೈಕಿ ಮನೆಗೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಆಗಸ್ಟ್ 2025ರಲ್ಲಿ ವಿಶೇಷ ನ್ಯಾಯಾಲಯ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ವಿರುದ್ಧದ ಉಳಿದ ಮೂರು ಪ್ರಕರಣಗಳ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ.




