ಚಂದ್ರವಳ್ಳಿ ನ್ಯೂಸ್, ಕೊಪ್ಪಳ:
ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಲು ಕೊಪ್ಪಳದ ಗವಿಮಠದ ಪೂಜ್ಯ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಅವರಿಗೆ ರಾಜ್ಯ ಸರ್ಕಾರದ ಪರವಾಗಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಅವರು ಅಧಿಕೃತವಾಗಿ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದರು.
ಸಂಸ್ಕೃತಿ, ಪರಂಪರೆ ಹಾಗೂ ಆಧ್ಯಾತ್ಮಿಕ ಮೌಲ್ಯಗಳ ಸಮ್ಮಿಲನವಾಗಿರುವ ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ಈ ಬಾರಿಯ ಐತಿಹಾಸಿಕ ದಸರಾ ಮಹೋತ್ಸವವು ಉದ್ಘಾಟನೆಗೊಳ್ಳುತ್ತಿರುವುದು ಸಮಸ್ತ ಕನ್ನಡಿಗರಿಗೆ ಅತ್ಯಂತ ಹೆಮ್ಮೆಯ ವಿಷಯವಾಗಿದೆ ಎಂದು ಸರ್ಕಾರ ತಿಳಿಸಿದೆ.
ಆಹ್ವಾನ ನೀಡುವ ಶುಭ ಸಂದರ್ಭದಲ್ಲಿ ಕೊಪ್ಪಳ ಸಂಸದ ರಾಜಶೇಖರ್ ಹಿಟ್ನಾಳ್, ಶಾಸಕ ರಾಘವೇಂದ್ರ ಹಿಟ್ನಾಳ್, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಹಾಗೂ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
ಈ ಕುರಿತು ರಾಜ್ಯ ಸರ್ಕಾರದ ಪರವಾಗಿ ಮುಖ್ಯಮಂತ್ರಿಗಳು, ನಾಡಿನ ಸಮಸ್ತ ಜನತೆಯು ಐತಿಹಾಸಿಕ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸಿ, ಸಾಂಸ್ಕೃತಿಕ ವೈಭವವನ್ನು ಕಣ್ತುಂಬಿಕೊಳ್ಳಬೇಕಾಗಿ ಪ್ರೀತಿಯ ಆಹ್ವಾನ ನೀಡಿದ್ದಾರೆ.




