ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಸರ್ಕಾರದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಅವರಿಗೆ ಅಭಿನಂದನಾ ಸಮಾರಂಭ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ನಾಯಕ ಸಮಾಜದ ಅಧ್ಯಕ್ಷರಾದ ಬಿ.ಕಾಂತರಾಜ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ನಾಯಕ ಸಮಾಜ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆಗಸ್ಟ್ 30 ರಂದು ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದರು.
100 ವಿದ್ಯಾರ್ಥಿಗಳಿಗೆ ಸನ್ಮಾನ : ಸಮಾಜದಲ್ಲಿ ಎಸ್ ಎಸ್ ಎಲ್ ಸಿ, ಪಿಯುಸಿ, ಪದವಿ, ಸ್ನಾತಕೋತ್ತರ, ಪಿಎಚ್‌ಡಿ, ಮೆಡಿಕಲ್, ಇಂಜಿನಿಯರಿಂಗ್ ಸೇರಿದಂತೆ 100 ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು ಎಂದು ಅಧ್ಯಕ್ಷ ಕಾಂತರಾಜ್ ಹೇಳಿದರು.
ಕಾರ್ಯಕ್ರಮದ ಸಾನ್ನಿಧ್ಯವನ್ನು ಶ್ರೀ ಜಗದ್ಗುರು ಪ್ರಸನ್ನಾನಂದಪುರಿ ಮಹಾಸ್ವಾಮಿಗಳು ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಭಾಗವಹಿಸಲಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ. ಮುಖ್ಯ ಅತಿಥಿಗಳಾಗಿ ಶಾಸಕರು, ಮಾಜಿ ಸಚಿವರು, ನಿವೃತ್ತ ಅಧಿಕಾರಿಗಳು, ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಂಸದರಾದ ಗೋವಿಂದ ಎಂ. ಕಾರಜೋಳ, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಮಾಜಿ ಸಚಿವ ಹೆಚ್.ಆಂಜನೇಯ, ನಿವೃತ್ತ ಜಿಲ್ಲಾಧಿಕಾರಿ ರಂಗಯ್ಯ, ಬೆಂಗಳೂರು ಬಿಬಿಎಂಪಿ ನಿವೃತ್ತ ಉಪ ಆಯುಕ್ತ ಡಾ.ಜೆ.ರಾಜು ಬೇತೂರು ಪಾಳ್ಯ, ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆ ಗ್ರೇಡ್ -1 ಸಹಾಯಕ ನಿರ್ದೇಶಕ ಓ.ಪರಮೇಶ್ವರಪ್ಪ ಇವರುಗಳಿಗೆ ಸನ್ಮಾನ ಮಾಡಿ ಗೌರವಿಸಲಾಗುವುದು ಎಂದರು.
ಸಚಿವರಿಗೆ ಅಭಿನಂದನೆ ಸಲ್ಲಿಸುವ ಮತ್ತು ಪ್ರತಿಭಾ ಪುರಸ್ಕಾರದ ಕಾರ್ಯಕ್ರಮಕ್ಕೆ ಸಮಾಜದ ಬಾಂಧವರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಬಿ.ಕಾಂತರಾಜ್ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ನಿವೃತ್ತ ಪ್ರಾಂಶುಪಾಲರಾದ ಗುಡ್ಡದೇಶ್ವರಪ್ಪ, ಅಹೋಬಲ ಟಿವಿಎಸ್ ಮಾಲಿಕ ಅರುಣ್ ಕುಮಾರ್, ಲಿಂಗವ್ವನಾಗತಿಹಳ್ಳಿ ತಿಪ್ಪೇಸ್ವಾಮಿ, ಮಾಜಿ ನಗರಸಭೆ ಸದಸ್ಯ ದೀಪು, ಗೋಪಾಲಸ್ವಾಮಿ ನಾಯಕ, ಕಾಟಿಹಳ್ಳಿ ಕರಿಯಣ್ಣ ಇದ್ದರು.




