ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಎತ್ತಿನಹೊಳೆ ಯೋಜನೆಯ ನೀರಿನಿಂದ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಹೋಬಳಿಯ ಬೆಳವಾಡಿ ಕೆರೆ ತುಂಬಿ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಶಾಸಕ ಹೆಚ್.ಡಿ.ತಮ್ಮಯ್ಯ ಹಾಗೂ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರು ಗುರುವಾರ ಕೆರೆಗೆ ಬಾಗಿನ ಅರ್ಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಹೆಚ್.ಡಿ.ತಮ್ಮಯ್ಯ, ಕಳೆದ ಮೂರು ವರ್ಷಗಳಿಂದ ಎತ್ತಿನಹೊಳೆ ಯೋಜನೆಗೆ ರಾಜ್ಯ ಸರ್ಕಾರ ನೀಡಿದ ಆದ್ಯತೆಯ ಫಲವಾಗಿ ಹಳೇಬೀಡು, ಬೆಳವಾಡಿ, ಮಾಚೇನಹಳ್ಳಿ, ಕುರುಬರಹಳ್ಳಿ ಹಾಗೂ ದೇವನೂರು ಸೇರಿದಂತೆ ಹಲವು ಕೆರೆಗಳಿಗೆ ನೀರು ತುಂಬುವಂತಾಗಿದೆ ಎಂದು ಹೇಳಿದರು.
ನೀರಿನ ಸಮಸ್ಯೆಯಿಂದಾಗಿ ಈ ಭಾಗದ ರೈತರು ಹಾಗೂ ಗ್ರಾಮಸ್ಥರು ಹಲವು ವರ್ಷಗಳಿಂದ ಸಂಕಷ್ಟ ಅನುಭವಿಸುತ್ತಿದ್ದರು. ತೋಟಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗದೆ ಊರು ತೊರೆಯುವಂತಹ ಪರಿಸ್ಥಿತಿಯೂ ನಿರ್ಮಾಣವಾಗಿತ್ತು. ಇದೀಗ ಎತ್ತಿನಹೊಳೆ ನೀರು ಕೆರೆಗಳಿಗೆ ಹರಿದುಬರುತ್ತಿರುವುದು ರೈತರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ ಎಂದರು.‘ನೀರಿದ್ದರೆ ಮಾತ್ರ ಎಲ್ಲವೂ ಸಾಧ್ಯ’
ನೀರಿದ್ದರೆ ಮಾತ್ರ ಕೃಷಿ, ತೋಟಗಾರಿಕೆ ಹಾಗೂ ಗ್ರಾಮೀಣ ಆರ್ಥಿಕ ಚಟುವಟಿಕೆಗಳು ಅಭಿವೃದ್ಧಿಯಾಗಲು ಸಾಧ್ಯ. ಆದ್ದರಿಂದ ಬೆಳವಾಡಿ ಕೆರೆ ಮಾತ್ರವಲ್ಲದೆ ಸುತ್ತಮುತ್ತಲಿನ ಎಲ್ಲ ಕೆರೆಗಳಿಗೂ ನೀರು ತುಂಬಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದರು.
ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಹಿಂದಿನ ಸರ್ಕಾರಗಳ ಅವಧಿಯಲ್ಲಿ ಕೈಗೊಂಡ ಕ್ರಮಗಳನ್ನು ಪ್ರಸ್ತಾಪಿಸಿದ ಅವರು, ಯೋಜನೆಗೆ ಆರಂಭದಲ್ಲಿ ನೀಡಲಾಗಿದ್ದ ಅನುದಾನವನ್ನು ನಂತರ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪರಿಷ್ಕರಿಸಿ ಕಾಮಗಾರಿಗೆ ವೇಗ ನೀಡಿತು. ಬಳಿಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಅವಧಿಯಲ್ಲಿ ಯೋಜನೆ ಪೂರ್ಣಗೊಳಿಸಿ ನೀರು ಹರಿಸುವ ಕಾರ್ಯಕ್ಕೆ ಚಾಲನೆ ದೊರೆತಿದೆ ಎಂದು ಹೇಳಿದರು.
ಈ ಯೋಜನೆಯ ಪ್ರಯೋಜನ ಚಿಕ್ಕಮಗಳೂರು ಜಿಲ್ಲೆಯ ಕೆಲವು ಭಾಗಗಳಿಗೂ ದೊರೆಯಬೇಕೆಂಬ ಬೇಡಿಕೆಯಿದ್ದು, ನೀರು ಹಂಚಿಕೆ ಹಾಗೂ ಯೋಜನೆಯ ಅನುಷ್ಠಾನದ ಕುರಿತು ರಾಜಕೀಯವಾಗಿ ಆರೋಪ, ಪ್ರತ್ಯಾರೋಪ ಮಾಡುವ ಬದಲು ಜನರ ಹಿತದೃಷ್ಟಿಯಿಂದ ಕೆಲಸ ಮಾಡಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಬಡವರು, ಮಹಿಳೆಯರು ಹಾಗೂ ಯುವ ಜನರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ಹೇಳಿದರು.
ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು ೨,೦೦೦ ರೂ., ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಅನ್ನಭಾಗ್ಯ ಯೋಜನೆಯಡಿ ಉಚಿತ ಅಕ್ಕಿ ಹಾಗೂ ಯುವನಿಧಿ ಯೋಜನೆಯಡಿ ವಿದ್ಯಾವಂತ ನಿರುದ್ಯೋಗಿ ಯುವಜನರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಇಂತಹ ಯೋಜನೆಗಳು ಬಡ ಕುಟುಂಬಗಳ ಬದುಕಿಗೆ ನೆರವಾಗಿವೆ ಎಂದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನ ಪೂರೈಸಿದ್ದು, ರೈತರ ಪರವಾಗಿ ಹಲವು ಮಹತ್ವದ ಘೋಷಣೆಗಳನ್ನು ಮಾಡುವ ನಿರೀಕ್ಷೆಯಿದೆ ಎಂದು ತಮ್ಮಯ್ಯ ಹೇಳಿದರು.
ರಾಜ್ಯ ಬರ ಪರಿಸ್ಥಿತಿಯಿಂದ ತತ್ತರಿಸುತ್ತಿರುವ ಸಂದರ್ಭದಲ್ಲಿ ಜನಪರವಾಗಿ ಕೆಲಸ ಮಾಡುವುದು ಚುನಾಯಿತ ಪ್ರತಿನಿಧಿಗಳ ಕರ್ತವ್ಯ. ತಾವು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ರೈತರು ಮತ್ತು ಬಡವರ ಪರವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ಬೆಳವಾಡಿ ಕೆರೆ ತುಂಬಿ ಕೋಡಿ ಬಿದ್ದಿರುವುದು ಈ ಭಾಗದ ಜನರಿಗೆ ಸಂತಸದ ಸಂಗತಿ ಎಂದರು.
ಈ ಭಾಗದ ಜನರು ಹಲವು ವರ್ಷಗಳಿಂದ ನೀರಿನ ಸಮಸ್ಯೆ ಎದುರಿಸುತ್ತಿದ್ದರು. ನೀರಿನ ಕೊರತೆಯಿಂದ ತೋಟಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗದೆ ಬೇರೆಡೆಗೆ ತೆರಳುವ ಪರಿಸ್ಥಿತಿ ಎದುರಾಗಿತ್ತು. ಎತ್ತಿನಹೊಳೆ ಯೋಜನೆಯಿಂದ ಇದೀಗ ಕೆರೆಗೆ ನೀರು ಬಂದಿರುವುದರಿಂದ ರೈತರು ಹಾಗೂ ಗ್ರಾಮಸ್ಥರ ಮುಖದಲ್ಲಿ ಸಂತಸ ಮೂಡಿದೆ ಎಂದು ಹೇಳಿದರು.
ಚುನಾವಣೆಗೆ ಮುನ್ನ ಈ ಭಾಗಕ್ಕೆ ನೀರು ತರುವ ಭರವಸೆ ನೀಡಲಾಗಿತ್ತು. ಅದರಂತೆ ಸರ್ಕಾರ ಎತ್ತಿನಹೊಳೆ ಯೋಜನೆಯ ಮೂಲಕ ನೀರು ತರುವ ಕಾರ್ಯ ಮಾಡಿದೆ. ಬೆಳವಾಡಿ ಮಾತ್ರವಲ್ಲದೆ ಸುತ್ತಮುತ್ತಲಿನ ಎಲ್ಲ ಕೆರೆಗಳಿಗೂ ನೀರು ತುಂಬಿಸುವುದು ಸರ್ಕಾರದ ಆಶಯವಾಗಿದೆ ಎಂದು ಹೇಳಿದರು.
ನೀರಿದ್ದರೆ ಮಾತ್ರ ಕೃಷಿ, ತೋಟಗಾರಿಕೆ ಹಾಗೂ ಗ್ರಾಮೀಣ ಜೀವನ ಸುಗಮವಾಗಲು ಸಾಧ್ಯ. ಆದ್ದರಿಂದ ಕೆರೆಗಳ ನೀರು ಸಂಗ್ರಹ ಸಾಮರ್ಥ್ಯ ಹೆಚ್ಚಿಸುವುದು ಹಾಗೂ ನಿರಂತರವಾಗಿ ನೀರು ಲಭ್ಯವಾಗುವಂತೆ ಮಾಡುವ ಕಾರ್ಯಕ್ಕೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಬೆಳವಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಿರಾಜ್ ಉನ್ನಿಸಾ, ಕಾಂಗ್ರೆಸ್ ಮುಖಂಡರಾದ ಅಮೀರ್ ಜಾನ್, ಭಾಗ್ಯ ಚಂದ್ರಶೇಖರ್, ಗ್ರಾಮ ಪಂಚಾಯಿತಿ ಸದಸ್ಯರಾದ ಸುಶೀಲ ಕೃಷ್ಣಮೂರ್ತಿ, ರಂಗಸ್ವಾಮಿ, ಪರಮೇಶ್, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಶಂಕರ ನಾಯಕ್, ಮುಖಂಡರಾದ ಕೆಂಗೆಗೌಡ, ನಾಗೇಗೌಡ, ಆನಂದ, ಕೃಷ್ಣಮೂರ್ತಿ, ಅಚ್ಯುತ್ ಹಾಗೂ ಗ್ರಾಮಸ್ಥರು ಇದ್ದರು.




