ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತದ ಉಕ್ಕು ವಲಯವು ಆತ್ಮನಿರ್ಭರತೆ ಹಾಗೂ ಜಾಗತಿಕ ಸ್ಪರ್ಧಾತ್ಮಕತೆಯತ್ತ ಮುನ್ನಡೆಯುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ನವದೆಹಲಿಯಲ್ಲಿ ಭಾರತೀಯ ಉಕ್ಕು ಪ್ರಾಧಿಕಾರ ಸಂಸ್ಥೆಯ ಸಮಗ್ರ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ಸಭೆ ನಡೆಸಿದ ಅವರು, ಉತ್ಪಾದನೆ ಹೆಚ್ಚಳ, ಕೆಲಸದ ಸ್ಥಳದಲ್ಲಿ ಸುರಕ್ಷತೆ, ಲಾಭದಾಯಕತೆ, ವಿಸ್ತರಣಾ ಯೋಜನೆಗಳು, ವಿಶೇಷ ಉಕ್ಕು ಮತ್ತು ಮೌಲ್ಯವರ್ಧಿತ ಉತ್ಪನ್ನಗಳ ಉತ್ಪಾದನೆ ಹಾಗೂ ಡಿಜಿಟಲ್ ರೂಪಾಂತರದ ವಿಷಯಗಳ ಕುರಿತು ಹಿರಿಯ ಅಧಿಕಾರಿಗಳು ಮತ್ತು ಘಟಕಗಳ ಅಧ್ಯಕ್ಷರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.
ದೇಶೀಯ ಉಕ್ಕು ಉತ್ಪಾದನೆಯನ್ನು ಬಲಪಡಿಸುವುದು, ಕಾರ್ಯಕ್ಷಮತೆ ಹೆಚ್ಚಿಸುವುದು ಮತ್ತು 'ವಿಕಸಿತ ಭಾರತ'ದ ಕನಸನ್ನು ಸಾಕಾರಗೊಳಿಸಲು ಜಾಗತಿಕ ಮಟ್ಟದ ಉಕ್ಕು ಪರಿಸರ ವ್ಯವಸ್ಥೆಯನ್ನು ನಿರ್ಮಿಸುವುದು ಸರ್ಕಾರದ ಮುಖ್ಯ ಗುರಿಯಾಗಿದೆ ಎಂದು ಸಚಿವರಾದ ಕುಮಾರಸ್ವಾಮಿ ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ಸಭೆಯಲ್ಲಿ ಉಕ್ಕು ಸಚಿವಾಲಯದ ಹಿರಿಯ ಅಧಿಕಾರಿಗಳು, SAIL ಎಂಡಿ ಹಾಗೂ ವಿವಿಧ ಉಕ್ಕು ಸ್ಥಾವರಗಳ ಉಸ್ತುವಾರಿ ನಿರ್ದೇಶಕರು ಉಪಸ್ಥಿತರಿದ್ದರು.




