ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ರಾಜ್ಯ ಸರ್ಕಾರದ ಸುತ್ತೋಲೆಯ ಮಾರ್ಗಸೂಚಿಗಳಂತೆ ಹಾಗೂ ಮಾನ್ಯ ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸ್ಥಳೀಯ ಶಾಸಕರ ನೇತೃತ್ವದಲ್ಲಿ ಪ್ರತಿ ತಿಂಗಳ ಎರಡನೇ ಹಾಗೂ ನಾಲ್ಕನೇ ಶನಿವಾರದಂದು ತಾಲ್ಲೂಕು ಮತ್ತು ಹೋಬಳಿ ಮಟ್ಟದಲ್ಲಿ 'ಪ್ರಜಾಸೇವಾ ಆಂದೋಲನ' ಸಭೆಗಳನ್ನು ಆಯೋಜಿಸಲು ನಿರ್ದೇಶಿಸಲಾಗಿದೆ.
ಅದರಂತೆ, ಸೆ.12 ರಂದು ಶನಿವಾರ ಬೆಳಿಗ್ಗೆ 11.00 ಗಂಟೆಗೆ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಶ್ರೀಪಂಚಲಿಂಗೇಶ್ವರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಎಂ. ಸಿದ್ದೇಶ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರು ತಮ್ಮ ವಿವಿಧ ಕುಂದುಕೊರತೆಗಳು ಹಾಗೂ ಸಮಸ್ಯೆಗಳ ಕುರಿತು ಅರ್ಜಿಗಳನ್ನು ಸಲ್ಲಿಸಲು ಈ ಕಾರ್ಯಕ್ರಮದಲ್ಲಿ ವಿಶೇಷ ಅವಕಾಶ ಕಲ್ಪಿಸಲಾಗಿದೆ. ಸ್ಥಳೀಯರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು, ಸರ್ಕಾರದ ಈ ಮಹತ್ವಾಕಾಂಕ್ಷೆಯ ಪ್ರಜಾಸೇವಾ ಆಂದೋಲನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ತಹಶೀಲ್ದಾರ್ ಅವರು ಕೋರಿದ್ದಾರೆ.




