ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಜಿಲ್ಲೆಯ ಸಾಗರ ತಾಲೂಕಿನ ಮುಂಬಾಳು ಗ್ರಾಮದ ಬಳಿ ಗುರುವಾರ ಮುಂಜಾನೆ ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್ಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದ್ದು, ಬಸ್ನ ಶೇ. 80ರಷ್ಟು ಭಾಗ ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ ವರದಿಯಾಗಿದೆ.
ಆನಂದಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಮುಂಬಾಳು ಗ್ರಾಮದ ಬಳಿ ಬೆಳಗ್ಗೆ ಸುಮಾರು 5.45ರ ಸುಮಾರಿಗೆ ಬೆಂಗಳೂರಿನಿಂದ ಸಾಗರದತ್ತ ತೆರಳುತ್ತಿದ್ದ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಸಮಯಪ್ರಜ್ಞೆಯಿಂದ ತಪ್ಪಿದ ಪ್ರಾಣಾಪಾಯ: ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಚಾಲಕ ಮತ್ತು ಕ್ಲೀನರ್ ತಕ್ಷಣವೇ ಸಮಯಪ್ರಜ್ಞೆ ಮೆರೆದಿದ್ದಾರೆ. ಕೂಡಲೇ ಬಸ್ ಅನ್ನು ನಿಲ್ಲಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಸಿರುವುದು ದೊಡ್ಡ ದುರಂತವನ್ನೇ ತಪ್ಪಿಸಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆ ನಡೆದ ಸಮಯದಲ್ಲಿ ಬಸ್ಸಿನಲ್ಲಿ ಕೇವಲ ಇಬ್ಬರು ಪ್ರಯಾಣಿಕರು ಮಾತ್ರ ಇದ್ದರು. ಶಿವಮೊಗ್ಗದಲ್ಲೇ ಹಿಂದಿನ ನಿಲುಗಡೆಯಲ್ಲೇ ಬಹುತೇಕ ಪ್ರಯಾಣಿಕರು ಇಳಿದಿದ್ದರಿಂದ ಹೆಚ್ಚಿನ ಅಪಾಯ ತಪ್ಪಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ದಳದಿಂದ ಬೆಂಕಿ ನಂದಿಕೆ: ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಬಸ್ನ ಸುಮಾರು ಶೇ. 80ರಷ್ಟು ಭಾಗ ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಮಾಹಿತಿ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹರಸಾಹಸಪಟ್ಟು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.
ಘಟನಾ ಸ್ಥಳಕ್ಕೆ ಆನಂದಪುರಂ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಪ್ರವೀಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಆನಂದಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.




