ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಹಾಗೂ ಕಲಾ ಚೈತನ್ಯ ಸೇವಾ ಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ-2025ರ ಅಂಗವಾಗಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಸಮಾರಂಭವನ್ನು ಇದೇ ಜೂನ್ 26ರಂದು ಮಧ್ಯಾಹ್ನ 2ಕ್ಕೆ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಕಚೇರಿ ಹತ್ತಿರದ ಕ್ರೀಡಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸುವರು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಎಂ.ಜೆ.ಮಹೇಶ್, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಕಲಾ ಚೈತನ್ಯ ಸೇವಾ ಸಂಸ್ಥೆ ಕಾರ್ಯದರ್ಶಿ ಹಾಗೂ ಚಿತ್ರ ಕಲಾವಿದ ನಾಗರಾಜ್ ಬೇದ್ರೆ ಭಾಗವಹಿಸುವರು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ದಾವಣಗೆರೆ ವಲಯ ಕಚೇರಿ ಹಿರಿಯ ಪರಿಸರ ಅಧಿಕಾರಿ ರಮೇಶ್ ಡಿ ನಾಯಕ್ ಭಾಗವಹಿಸುವರು.
ವಿಶ್ವ ಪರಿಸರ ದಿನಾಚರಣೆ-2025ರ ಪ್ರಯುಕ್ತ ಯುನ್‍ಇಪಿ ಬಿಡುಗಡೆ ಮಾಡಿರುವ ಘೋಷವಾಕ್ಯ ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು ಎಂಬ ವಿಷಯದ ಕುರಿತು ಚಿತ್ರದುರ್ಗ ನಗರ ವ್ಯಾಪ್ತಿಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಥಳದಲ್ಲೆ ಚಿತ್ರಕಲೆ ಸ್ಪರ್ಧೆಯನ್ನು ಜೂನ್ 26ರಂದು ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಮೀಪದ ಕ್ರೀಡಾ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಸಮಾರಂಭವನ್ನು ಅದೇ ದಿನ ಮಧ್ಯಾಹ್ನ 2ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಚಿತ್ರದುರ್ಗ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಅಸಿಫ್ ಖಾನ್ ತಿಳಿಸಿದ್ದಾರೆ.


