ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ನಗರದ ಬಿಜೆಪಿ ರಾಜ್ಯ ಕಾರ್ಯಾಲಯ 'ಜಗನ್ನಾಥ ಭವನ'ದಲ್ಲಿ ಇಂದು ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನಗಳನ್ನು ಅರ್ಪಿಸಲಾಯಿತು.
ಈ ವೇಳೆ ಮಾತನಾಡಿದ ನಾಯಕರು, ಮಹರ್ಷಿ ವಾಲ್ಮೀಕಿಯವರು ರಚಿಸಿದ ರಾಮಾಯಣ ಮಹಾಕಾವ್ಯವು ಜಗತ್ತಿಗೆ ಧರ್ಮ, ಸತ್ಯ, ನ್ಯಾಯ, ಮಾನವೀಯತೆ ಹಾಗೂ ಆದರ್ಶ ಜೀವನದ ಅಮೂಲ್ಯ ಮೌಲ್ಯಗಳನ್ನು ಸಾರಿದೆ. ಅವರ ಜೀವನಾದರ್ಶಗಳು ಮತ್ತು ಚಿಂತನೆಗಳು ಸದಾ ನಮಗೆಲ್ಲರಿಗೂ ಸ್ಫೂರ್ತಿಯಾಗಿರಲಿ ಎಂದು ಆಶಿಸಿದರು.
ಈ ವಿಶೇಷ ಸಂದರ್ಭದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ, ರಾಜ್ಯಸಭಾ ಸಂಸದ ಲೆಹರ್ ಸಿಂಗ್ ಸಿರೋಯಾ, ಮಾಜಿ ಸಚಿವರು ಹಾಗೂ ಶಾಸಕ ಎಸ್. ಸುರೇಶ್ ಕುಮಾರ್, ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಮಾಜಿ ಪರಿಷತ್ ಸದಸ್ಯ ಎಂ.ಡಿ. ಲಕ್ಷ್ಮೀನಾರಾಯಣ, ಎಸ್.ಟಿ. ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.



