ಚಂದ್ರವಳ್ಳಿ ನ್ಯೂಸ್, ಹೊಸಪೇಟೆ:
ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿದು, ಜಾತಿ, ಧರ್ಮ, ಭಾಷೆ ಹಾಗೂ ರಾಜಕೀಯ ಭೇದವಿಲ್ಲದೆ ಸಂಕಷ್ಟದಲ್ಲಿರುವವರಿಗೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಜಾಗತಿಕ ಸಂಸ್ಥೆ ಭಾರತೀಯ ರೆಡ್‌ಕ್ರಾಸ್ ಎಂದು ಟಿಎಂಎಇ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಡಾ.ಎಂ.ಡಿ. ಸಮುದ್ರಿ ಹೇಳಿದರು.
ನಗರದ ಟಿಎಂಎಇ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ಶನಿವಾರ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ವಿಜಯನಗರ ಜಿಲ್ಲಾ ಘಟಕದ ವತಿಯಿಂದ ಆಕ್ಸಿಜನ್ ಕಾನ್ಸನ್‌ಟ್ರೇಟರ್ ಹಾಗೂ ಪಲ್ಸ್ ಆಕ್ಸಿಮೀಟರ್‌ಗಳನ್ನು ಕಾಲೇಜಿಗೆ ದೇಣಿಗೆಯಾಗಿ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯುದ್ಧ, ಪ್ರಕೃತಿ ವಿಕೋಪ, ಆರೋಗ್ಯ ಬಿಕ್ಕಟ್ಟು ಸೇರಿದಂತೆ ವಿವಿಧ ಸಂಕಷ್ಟದ ಸಂದರ್ಭಗಳಲ್ಲಿ ರೆಡ್‌ಕ್ರಾಸ್ ಸಲ್ಲಿಸುತ್ತಿರುವ ಸೇವೆ ವಿಶ್ವದಾದ್ಯಂತ ಮಾದರಿಯಾಗಿದೆ. ಗಾಯಾಳುಗಳಿಗೆ ನೆರವು, ವಿಪತ್ತು ಸಂತ್ರಸ್ತರ ರಕ್ಷಣೆ, ಆರೋಗ್ಯ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ಸಂಸ್ಥೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು.
ಯುದ್ಧದಲ್ಲಿ ಗಾಯಗೊಂಡ ಸೈನಿಕರಿಗೆ ನೆರವು ನೀಡುವ ಉದ್ದೇಶದಿಂದ ಜಿನೀವಾದಲ್ಲಿ ನಡೆದ ಅಂತರರಾಷ್ಟ್ರೀಯ ಚರ್ಚೆಗಳ ಹಿನ್ನೆಲೆಯಲ್ಲಿ ರೆಡ್‌ಕ್ರಾಸ್‌ಸಂಸ್ಥೆಯ ಉದಯವಾಯಿತು. ರೆಡ್‌ಕ್ರಾಸ್‌ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ದೇಶದಲ್ಲಿ ರಾಷ್ಟ್ರಪತಿಗಳು ರಾಷ್ಟ್ರೀಯ ಘಟಕದ ಅಧ್ಯಕ್ಷರಾಗಿದ್ದರೆ, ರಾಜ್ಯದಲ್ಲಿ ರಾಜ್ಯಪಾಲರು ಹಾಗೂ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ಘಟಕದ ಅಧ್ಯಕ್ಷರಾಗಿರುತ್ತಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಕೈದಿಗಳ ವಿನಿಮಯ, ಸಂಘರ್ಷಪೀಡಿತರ ನೆರವು ಹಾಗೂ ಮಾನವೀಯ ಕಾರ್ಯಗಳಲ್ಲಿ ಅಂತರರಾಷ್ಟ್ರೀಯ ರೆಡ್‌ಕ್ರಾಸ್‌ಮಹತ್ವದ ಪಾತ್ರ ವಹಿಸುತ್ತಿದೆ. ಸಂಕಷ್ಟದ ಸಂದರ್ಭದಲ್ಲಿ ತ್ವರಿತವಾಗಿ ಸ್ಪಂದಿಸುವ ಮೂಲಕ ಮಾನವೀಯತೆಯ ಮೌಲ್ಯವನ್ನು ಎತ್ತಿಹಿಡಿಯುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ವಿಜಯನಗರ ಜಿಲ್ಲಾ ಘಟಕದ ಅಧ್ಯಕ್ಷ ರವಿಶಂಕರ್, ಪ್ರಧಾನ ಕಾರ್ಯದರ್ಶಿ ಕೆ.ಎಂ. ರೇಖಾ ಪ್ರಕಾಶ್, ಕಾರ್ಯಕಾರಿ ಸಮಿತಿ ಸದಸ್ಯರಾದ ಸತ್ಯನಾರಾಯಣ, ಡಾ. ಅಶ್ವಿನಿ, ಡಾ. ಭಟ್, ಡಾ. ವಿಜಯಕುಮಾರ್, ಡಾ. ಶಶಿರೇಖಾ ಡಾ. ಪೊನ್ನ ರಾಜ್ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.




