ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಟೌನ್‌ಶಿಪ್‌ಯೋಜನೆಗೆ ಮರುಜೀವ ನೀಡಲಾಗುತ್ತಿದ್ದು, ಇದನ್ನು ವಿಶ್ವದರ್ಜೆಯ ಸೌಲಭ್ಯಗಳನ್ನೊಳಗೊಂಡ ಅತ್ಯಾಧುನಿಕ 'ಎಐ ಸಿಟಿ'ಯಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ಯೋಜನೆಯು ಬೆಂಗಳೂರು ದಕ್ಷಿಣ ಜಿಲ್ಲೆಯ ಸಮಗ್ರ ಚಿತ್ರಣವನ್ನೇ ಬದಲಿಸಲಿದ್ದು, ವಿಶ್ವದರ್ಜೆಯ ರಸ್ತೆಗಳು, ಮೆಟ್ರೋ ಸಂಪರ್ಕ, ಅತ್ಯಾಧುನಿಕ ಕ್ರೀಡಾಂಗಣ, ವಿಶಾಲ ಉದ್ಯಾನವನಗಳು ಹಾಗೂ ಸುಸಜ್ಜಿತ ವಸತಿ ಸಮುಚ್ಚಯಗಳನ್ನು ಒಳಗೊಂಡಿರಲಿದೆ ಎಂದು ಅವರು ತಿಳಿಸಿದ್ದಾರೆ.
ಎಕರೆಗೆ ₹3 ಕೋಟಿಗೂ ಹೆಚ್ಚು ಪರಿಹಾರ:
ಯೋಜನೆಯಲ್ಲಿ ರೈತರ ಹಿತರಕ್ಷಣೆಗೆ ಪ್ರಥಮ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದ ಅವರು, "ಹಿಂದಿನ ಸರ್ಕಾರ ಎಕರೆ ಜಮೀನಿಗೆ ಕೇವಲ ₹25 ಲಕ್ಷ ನಿಗದಿಪಡಿಸಿತ್ತು. ಆದರೆ ನಮ್ಮ ಸರ್ಕಾರ ಪ್ರತಿ ಎಕರೆಗೆ ₹3 ಕೋಟಿಗೂ ಹೆಚ್ಚು ಪರಿಹಾರ ನೀಡಲು ನಿರ್ಧರಿಸಿದೆ. ಹಣದ ಬದಲಾಗಿ ಭೂಮಿ ಬಯಸುವ ರೈತರಿಗೆ ಶೇ. 50 ರಷ್ಟು ಅಭಿವೃದ್ಧಿಪಡಿಸಿದ ಜಾಗವನ್ನು ನೀಡಲಾಗುವುದು" ಎಂದು ವಿವರ ನೀಡಿದ್ದಾರೆ.
ಒತ್ತಾಯಪೂರ್ವಕ ಭೂಸ್ವಾಧೀನವಿಲ್ಲ:
ಈ ಯೋಜನೆಗಾಗಿ ನಡೆಯುವ ಭೂಸ್ವಾಧೀನ ಪ್ರಕ್ರಿಯೆಯು ಸಂಪೂರ್ಣವಾಗಿ ಐಚ್ಛಿಕವಾಗಿದ್ದು, ಜಮೀನು ನೀಡಲು ಇಷ್ಟವಿಲ್ಲದ ಯಾವುದೇ ರೈತರ ಮೇಲೆಯೂ ಒತ್ತಡ ಹೇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಯುವಜನತೆಗೆ ಅಪಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸಿ, ನಾಡಿನ ಅನ್ನದಾತರಿಗೆ ಗೌರವಯುತ ಜೀವನ ಒದಗಿಸಲು ಸರ್ಕಾರ ಬದ್ಧವಾಗಿದ್ದು, ಈ ಬೃಹತ್ ಯೋಜನೆಗೆ ಸಾರ್ವಜನಿಕರು ಹಾಗೂ ರೈತರು ಸಹಕರಿಸಬೇಕು ಎಂದು ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.



