ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಈ ಹಿಂದೆ ತಮ್ಮ ವಿರುದ್ಧ ಅತ್ಯಾಚಾರ ದೂರು ನೀಡಿದ್ದ ಮಹಿಳೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಮತ್ತು ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿಯದಂತೆ ಬೆದರಿಕೆ ಹಾಕಿದ ಆರೋಪದ ಮೇಲೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
40 ವರ್ಷದ ಸಂತ್ರಸ್ತ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 72 (ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಗುರುತು ಬಹಿರಂಗ) ಹಾಗೂ ಸೆಕ್ಷನ್ 351(2) (ಅಪರಾಧ ಬೆದರಿಕೆ) ಅಡಿಯಲ್ಲಿ ಬುಧವಾರ ಎಫ್ಐಆರ್ ದಾಖಲಿಸಲಾಗಿದೆ.
ಏನಿದು ಪ್ರಕರಣ?: ನವೆಂಬರ್ 8ರಂದು ಯಶವಂತಪುರದ ಬಿ.ಕೆ. ನಗರದಲ್ಲಿ ಬಿಜೆಪಿ ಕಚೇರಿ ಉದ್ಘಾಟನೆ ವೇಳೆ ನೀಡಿದ ಸಾರ್ವಜನಿಕ ಹೇಳಿಕೆ ಮತ್ತು ನವೆಂಬರ್ 14ರಂದು ಸುದ್ದಿ ವಾಹಿನಿಯೊಂದರಲ್ಲಿ ಪ್ರಸಾರವಾದ ವಿಡಿಯೋದಲ್ಲಿ ಮುನಿರತ್ನ ಅವರು ತಮ್ಮ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ, ಗುರುತು ಬಹಿರಂಗಪಡಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ಕೋವಿಡ್ ಅವಧಿಯಲ್ಲಿ ಕಗ್ಗಲಿಪುರ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣವು ಸದ್ಯ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ತಾನು ಸಾಕ್ಷ್ಯ ಹೇಳುವುದನ್ನು ತಡೆಯಲು ಹಾಗೂ ಮಾನಸಿಕ ಕಿರುಕುಳ ನೀಡಲು ಶಾಸಕರು ಈ ರೀತಿ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ತಮ್ಮ ಆರೋಪಕ್ಕೆ ಪೂರಕವಾದ ವಿಡಿಯೋ ಸಾಕ್ಷ್ಯಗಳನ್ನು ತನಿಖಾಧಿಕಾರಿಗಳಿಗೆ ಸಲ್ಲಿಸುವುದಾಗಿ ಮಹಿಳೆ ತಿಳಿಸಿದ್ದು, ಯಶವಂತಪುರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.




