ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ವರ್ಗಾವಣೆ ಪ್ರಕ್ರಿಯೆ ನಡೆದಿದ್ದು, ಹಿರಿಯ ಐಪಿಎಸ್ ಅಧಿಕಾರಿ ಎನ್. ಸತೀಶ್ ಕುಮಾರ್ ಅವರನ್ನು ದಾವಣಗೆರೆ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕರನ್ನಾಗಿ (ಐಜಿಪಿ) ನೇಮಕ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಸಂಜಯ್ ಬಿ. ಎಸ್. ಅವರು ರಾಜ್ಯಪಾಲರ ಆದೇಶದ ಅನುಸಾರ ಈ ಅಧಿಸೂಚನೆಯನ್ನು ಹೊರಡಿಸಿದ್ದಾರೆ.
ಪ್ರಸ್ತುತ ಬೆಂಗಳೂರಿನ ಪೊಲೀಸ್ ಪ್ರಧಾನ ಕಚೇರಿ-1 ರ ಐಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 2003ನೇ ಬ್ಯಾಚ್‌ನ ಹಿರಿಯ ಐಪಿಎಸ್ ಅಧಿಕಾರಿ ಎನ್. ಸತೀಶ್ ಕುಮಾರ್ ಅವರನ್ನು, ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಖಾಲಿ ಇದ್ದ ದಾವಣಗೆರೆ ಪೂರ್ವ ವಲಯದ ಐಜಿಪಿ ಹುದ್ದೆಗೆ ವರ್ಗಾಯಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಹಿನ್ನೆಲೆ ಹಾಗೂ ಒಳಪಡುವ ಜಿಲ್ಲೆಗಳು:
ದಾವಣಗೆರೆ ಪೂರ್ವ ವಲಯದ ಐಜಿಪಿಯಾಗಿದ್ದ ಡಾ. ಬಿ.ಆರ್. ರವಿಕಾಂತೇಗೌಡ ಅವರು ವಯೋನಿವೃತ್ತಿ ಹೊಂದಿದ್ದರಿಂದ ಕಳೆದ ಕೆಲವು ವಾರಗಳಿಂದ ಈ ಹುದ್ದೆ ಖಾಲಿ ಉಳಿದಿತ್ತು. ಈಗ ದಕ್ಷ ಅಧಿಕಾರಿಯಾಗಿರುವ ಎನ್. ಸತೀಶ್ ಕುಮಾರ್ ಅವರ ನೇಮಕದಿಂದ ಆ ಭಾಗದ ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆಗೆ ಮತ್ತಷ್ಟು ಬಲ ಬಂದಂತಾಗಿದೆ. ಪೂರ್ವ ವಲಯದ ವ್ಯಾಪ್ತಿಗೆ ದಾವಣಗೆರೆ, ಚಿತ್ರದುರ್ಗ ಮತ್ತು ಶಿವಮೊಗ್ಗ ಸೇರಿದಂತೆ ಪ್ರಮುಖ ಜಿಲ್ಲೆಗಳು ಒಳಪಡುತ್ತವೆ.




