ಚಂದ್ರವಳ್ಳಿ ನ್ಯೂಸ್, ಮೈಸೂರು:
ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದರೂ, ಕಾಂಗ್ರೆಸ್ ಸರ್ಕಾರ ತನ್ನ ಕಾರ್ಯಕರ್ತರಿಗೆ ಲಾಭ ಮಾಡಿಕೊಡುವ ಯೋಜನೆಗಳನ್ನು ಘೋಷಿಸುವ ಮೂಲಕ ಸಾರ್ವಜನಿಕರ ತೆರಿಗೆ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ದುರಹಂಕಾರ ಮತ್ತು ಸರ್ವಾಧಿಕಾರಿ ಧೋರಣೆಯಿಂದ ಜನರು ಬೇಸತ್ತಿದ್ದಾರೆ ಎಂದರು. ತಮ್ಮ ಹೇಳಿಕೆಗಳು ಅಸೂಯೆಯಿಂದ ಕೂಡಿಲ್ಲ ಎಂದು ಸ್ಪಷ್ಟಪಡಿಸಿದರು.
ಉಪಚುನಾವಣೆ ಟಿಕೆಟ್ ಗೊಂದಲ: ಮುಂಬರುವ ಹಿರಿಯೂರು ಉಪಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಟಿಕೆಟ್ ಆಕಾಂಕ್ಷಿಗಳಾಗಿರುವುದನ್ನು ಒಪ್ಪಿಕೊಂಡ ಕುಮಾರಸ್ವಾಮಿ, ಎರಡೂ ಪಕ್ಷಗಳ ಆಕಾಂಕ್ಷೆ ತಪ್ಪಲ್ಲ ಎಂದರು. ವೈಯಕ್ತಿಕ ಪ್ರತಿಷ್ಠೆಗಿಂತ ಗೆಲುವು ಮುಖ್ಯವಾಗಿದ್ದು, ಮೈತ್ರಿ ಪಕ್ಷಗಳ ನಾಯಕರು ಒಟ್ಟಿಗೆ ಕುಳಿತು ಚರ್ಚಿಸಿ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪರಮೇಶ್ವರ್ ವಿರುದ್ಧ ಕಿಡಿ: ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ ಕುರಿತ ಗೃಹ ಸಚಿವ ಜಿ. ಪರಮೇಶ್ವರ್ ಅವರ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ದಲಿತರ ಉನ್ನತಿಗೆ ಪರಮೇಶ್ವರ್ ಅವರ ಕುಟುಂಬದ ಕೊಡುಗೆ ಏನು ಎಂದು ಪ್ರಶ್ನಿಸಿದರು. ತಮ್ಮ ವೈಫಲ್ಯಗಳನ್ನು ಮುಚ್ಚಿಹಾಕಲು ಗೃಹ ಸಚಿವರು ಸಂಬಂಧವಿಲ್ಲದ ವಿಷಯಗಳನ್ನು ಪ್ರಸ್ತಾಪಿಸುತ್ತಿದ್ದಾರೆ ಎಂದು ದೂರಿದರು.
ಸೋನಿಯಾ ಪುಸ್ತಕ ಹಾಗೂ ಸಿದ್ದರಾಮಯ್ಯ ಬಗ್ಗೆ ವ್ಯಂಗ್ಯ: ಸೋನಿಯಾ ಗಾಂಧಿ ಅವರ ಪುಸ್ತಕವನ್ನು ಓದಿದ ನಂತರವಷ್ಟೇ ಪ್ರತಿಕ್ರಿಯಿಸುವುದಾಗಿ ತಿಳಿಸಿದ ಅವರು, ರಾಜಕೀಯವಾಗಿ ಅವರು ಸರಿ ಮತ್ತು ತಪ್ಪು ನಿರ್ಧಾರಗಳೆರಡನ್ನೂ ತೆಗೆದುಕೊಂಡಿದ್ದಾರೆ ಎಂದರು. ಇದೇ ವೇಳೆ, ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಸಿದ್ದರಾಮಯ್ಯ ಅವರನ್ನು ಹಿಂಬದಿ ಸಾಲಿನಲ್ಲಿ ಕೂರಿಸಿದ್ದಕ್ಕೆ ವ್ಯಂಗ್ಯವಾಡಿದ ಕುಮಾರಸ್ವಾಮಿ, "ಕನಿಷ್ಠ ಅಲ್ಲಿ ಕುಳಿತುಕೊಳ್ಳಲಾದರೂ ಅವಕಾಶ ನೀಡಿದ್ದಾರಲ್ಲ, ಸಂಪೂರ್ಣವಾಗಿ ಹೊರಹಾಕದೆ ಇರುವುದೇ ಅವರ ಅದೃಷ್ಟ" ಎಂದು ಟೀಕಿಸಿದರು.




