ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲ್ಲೂಕಿನ ಬೇತೂರುಪಾಳ್ಯದ ಸರ್ಕಾರಿ ಪ್ರೌಢಶಾಲೆಯಲ್ಲಿ 2016-17ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಂದ 'ಹಳೆಯ ವಿದ್ಯಾರ್ಥಿಗಳ ಪುನರ್ಮಿಲನ ಹಾಗೂ ಗುರುವಂದನಾ' ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು.
ಶಾಲೆಯ ಆವರಣದಲ್ಲಿ ನಡೆದ ಈ ಭಾವಪೂರ್ಣ ಸಮಾರಂಭದಲ್ಲಿ ವಿದ್ಯಾರ್ಥಿಗಳು ತಮಗೆ ಅಕ್ಷರ ಕಲಿಸಿದ ಗುರುಗಳನ್ನು ಗೌರವಿಸಿ, ಸನ್ಮಾನಿಸುವ ಮೂಲಕ ತಮ್ಮ ಕೃತಜ್ಞತೆಯನ್ನು ಸಲ್ಲಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯೋಪಾಧ್ಯಾಯರಾದ ರಂಗಪ್ಪನವರು, "ಶಾಲೆಯಿಂದ ಹೊರಹೋದ ವಿದ್ಯಾರ್ಥಿಗಳು ತಮ್ಮ ಶಾಲೆಯ ದಿನಗಳನ್ನು ನೆನಪಿಸಿಕೊಂಡು, ಹಳೆಯ ವಿದ್ಯಾರ್ಥಿಗಳಾಗಿ ಒಂದೆಡೆ ಸೇರಿ ಗುರುವಂದನೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯ. ಪ್ರತಿಯೊಬ್ಬ ವಿದ್ಯಾರ್ಥಿಯೂ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬೆಳೆಯುವುದೇ ಶಿಕ್ಷಕರಿಗೆ ನೀಡುವ ದೊಡ್ಡ ಉಡುಗೊರೆ" ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರಾದ ಹನುಮೇಶ್, ಜಿ. ತಿಪ್ಪೇಸ್ವಾಮಿ ಹಾಗೂ ಪ್ರದೀಪ್ ಅವರು ಭಾಗವಹಿಸಿ, ವಿದ್ಯಾರ್ಥಿಗಳೊಂದಿಗಿನ ತಮ್ಮ ಹಳೆಯ ನೆನಪುಗಳನ್ನು ಮೆಲಕುಹಾಕಿ, ಅವರ ಭವಿಷ್ಯದ ಜೀವನಕ್ಕೆ ಉತ್ತಮ ಮಾರ್ಗದರ್ಶನ ಮತ್ತು ಆಶೀರ್ವಾದ ನೀಡಿದರು.
ಇದೇ ಸಂದರ್ಭದಲ್ಲಿ ಪ್ರಸ್ತುತ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಗ್ರಾಮದ ಹಿರಿಯರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಹಳೆಯ ವಿದ್ಯಾರ್ಥಿಗಳ ಸಮ್ಮಿಲನವು ಶಾಲೆಯ ಆವರಣದಲ್ಲಿ ಸಂಭ್ರಮದ ವಾತಾವರಣವನ್ನು ನಿರ್ಮಿಸಿದ್ದು, ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿತು.



