ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಬೆಂಗಳೂರಿನ ಲೋಕಭವನದಲ್ಲಿ ನಡೆದ ಸರಳ ಹಾಗೂ ಗಂಭೀರ ಸಮಾರಂಭದಲ್ಲಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಸ್ವೀಕರಿಸಿದರು. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರು ನೂತನ ರಾಜ್ಯಪಾಲರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ನಿರ್ಗಮಿತ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಧಾ ಯಾದವ್ ಅವರನ್ನು ಕರ್ನಾಟಕದ ರಾಜ್ಯಪಾಲರನ್ನಾಗಿ ನೇಮಕ ಮಾಡಿದ್ದರು. ಇದರೊಂದಿಗೆ ಸುಧಾ ಯಾದವ್ ಅವರು ಕರ್ನಾಟಕದ ರಾಜ್ಯಪಾಲ ಹುದ್ದೆ ಅಲಂಕರಿಸಿದ ಎರಡನೇ ಮಹಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಇದಕ್ಕೂ ಮುಂಚೆ ವಿ.ಎಸ್. ರಮಾದೇವಿ ಅವರು 1999ರಿಂದ 2002ರವರೆಗೆ ರಾಜ್ಯದ ಪ್ರಥಮ ಮಹಿಳಾ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಕಾರ್ಗಿಲ್ ವೀರ ಯೋಧನ ಪತ್ನಿ, ಧೀಮತ ನಾಯಕಿಸುಧಾ ಯಾದವ್ ಅವರ ಜೀವನ ಹೋರಾಟ ಮತ್ತು ಸಾಧನೆ ಸ್ಫೂರ್ತಿದಾಯಕವಾಗಿದೆ. ಇವರ ಪತಿ ಸುಖಬೀರ್ ಸಿಂಗ್ ಯಾದವ್ ಅವರು ಗಡಿ ಭದ್ರತಾ ಪಡೆಯ ಡೆಪ್ಯುಟಿ ಕಮಾಂಡೆಂಟ್ ಆಗಿದ್ದರು.
1999ರ ಕಾರ್ಗಿಲ್ ಯುದ್ಧದ ವೇಳೆ ಪಾಕಿಸ್ತಾನಿ ಪಡೆಗಳ ವಿರುದ್ಧದ ಹೋರಾಟದಲ್ಲಿ ಅವರು ಫಿರಂಗಿ ದಾಳಿಗೆ ಹುತಾತ್ಮರಾಗಿದ್ದರು. ಇವರ ಶೌಲ್ಯವನ್ನು ಗುರುತಿಸಿ ಮರಣೋತ್ತರವಾಗಿ 'ಸೇನಾ ಪದಕ' ನೀಡಿ ಗೌರವಿಸಲಾಗಿತ್ತು. ಪತಿಯ ಅಗಲಿಕೆಯ ಬಳಿಕ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟ ಸುಧಾ ಯಾದವ್, 1999ರಲ್ಲಿ ಹರಿಯಾಣದ ಮಹೇಂದ್ರಗಢ ಲೋಕಸಭಾ ಕ್ಷೇತ್ರದಿಂದ ಸಂಸತ್ ಸದಸ್ಯೆಯಾಗಿ ಆಯ್ಕೆಯಾಗಿ 2004ರವರೆಗೆ ಸೇವೆ ಸಲ್ಲಿಸಿದರು. ವಿದ್ಯಾತನ ಮತ್ತು ರಾಜಕೀಯ ಪ್ರಯಾಣಶಿಕ್ಷಣ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿರುವ ಸುಧಾ ಯಾದವ್ ಅವರು, ಅಂದಿನ ರೂರ್ಕಿ ವಿಶ್ವವಿದ್ಯಾಲಯದಲ್ಲಿ ರಸಾಯನಶಾಸ್ತ್ರದಲ್ಲಿ ಎಂ.ಎಸ್ಸಿ. ಪದವಿಯನ್ನು ಚಿನ್ನದ ಪದಕದೊಂದಿಗೆ ಪಡೆದಿದ್ದು, ಬಳಿಕ ಇದೇ ವಿಷಯದಲ್ಲಿ ಡಾಕ್ಟರೇಟ್ ಗಳಿಸಿದ್ದಾರೆ. ರಾಜಕೀಯವಾಗಿ ಭಾರತೀಯ ಜನತಾ ಪಕ್ಷದಲ್ಲಿ ವಿವಿಧ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿರುವ ಅವರು, ಪಕ್ಷದ ಒಬಿಸಿ ಮೋರ್ಚಾದ ರಾಷ್ಟ್ರೀಯ ಉಸ್ತುವಾರಿಯಾಗಿ ಹಾಗೂ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ವಿಶೇಷವೆಂದರೆ, 2022ರಲ್ಲಿ ಬಿಜೆಪಿಯ ಅತ್ಯುನ್ನತ ನಿರ್ಣಾಯಕ ಮಂಡಳಿಯಾದ ಸಂಸದೀಯ ಮಂಡಳಿಗೆ ನೇಮಕಗೊಳ್ಳುವ ಮೂಲಕ, ದಿವಂಗತ ಸುಷ್ಮಾ ಸ್ವರಾಜ್ ಅವರ ಬಳಿಕ ಈ ಸ್ಥಾನ ಪಡೆದ ಎರಡನೇ ಮಹಿಳಾ ನಾಯಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಲೋಕಭವನದ ಗ್ಲಾಸ್ ಹೌಸ್ನಲ್ಲಿ ಜರುಗಿದ ಈ ಸಮಾರಂಭದಲ್ಲಿ ನಿರ್ಗಮಿತ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ, ಸಚಿವರಾದ ಶರಣಪ್ರಕಾಶ್ ಪಾಟೀಲ್, ಕೆ.ಜೆ. ಜಾರ್ಜ್, ಪ್ರಿಯಾಂಕ್ ಖರ್ಗೆ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹೈಕೋರ್ಟ್ ನ್ಯಾಯಮೂರ್ತಿಗಳು, ಶಾಸಕರು, ಸಂಸದರು ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳು ಉಪಸ್ಥಿತರಿದ್ದರು.




