ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು ಅಮಾನತುಗೊಳಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ತೀವ್ರ ಖಂಡನೀಯ," ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸರ್ಕಾರದ ನಡೆಯನ್ನು ಕಠಿಣವಾಗಿ ಟೀಕಿಸಿರುವ ಅವರು, "ಕರ್ತವ್ಯದ ಸಮಯದಲ್ಲಿ ಯಾವುದೇ ಲೋಪ ಎಸಗದೆ, ತಮ್ಮ ವೈಯಕ್ತಿಕ ಸಮಯದಲ್ಲಿ ಸಾಂಸ್ಕೃತಿಕ ಹಾಗೂ ಸಾಮಾಜಿಕ ಸಂಘಟನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಶಿಕ್ಷಕರನ್ನು ಅಮಾನತುಗೊಳಿಸಿರುವುದು ಯಾವ ನ್ಯಾಯ? ಸರ್ಕಾರಿ ನೌಕರರಾದ ತಕ್ಷಣವೇ ಅವರಿಗೆ ವೈಯಕ್ತಿಕ ಸ್ವಾತಂತ್ರ್ಯವೇ ಇರುವುದಿಲ್ಲವೇ?" ಎಂದು ಪ್ರಶ್ನಿಸಿದ್ದಾರೆ.
"ಸಂಘ ಪರಿವಾರದೊಂದಿಗೆ ಸಂಪರ್ಕ ಹೊಂದಿರುವವರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂಬುದಕ್ಕೆ ಈ ಘಟನೆಯೇ ಸ್ಪಷ್ಟ ಉದಾಹರಣೆ. ಆರ್‌ಎಸ್‌ಎಸ್ ಎಂದರೆ ಕಾಂಗ್ರೆಸ್ ಸರ್ಕಾರಕ್ಕೆ ಇಷ್ಟೊಂದು ಭಯವೇಕೆ?" ಎಂದು ಅವರು ತೇವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.
"ತಮ್ಮ ರಾಜಕೀಯ ಸಿದ್ಧಾಂತಕ್ಕೆ ವಿರುದ್ಧವಾದವರನ್ನು ಬೆದರಿಸುವುದು, ಅಮಾನತುಗೊಳಿಸುವುದು ಹಾಗೂ ಸರ್ಕಾರಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಬಾಯಿ ಮುಚ್ಚಿಸಲು ಯತ್ನಿಸುವುದು ಪ್ರಜಾಪ್ರಭುತ್ವದ ಲಕ್ಷಣವಲ್ಲ, ಬದಲಿಗೆ ಸರ್ವಾಧಿಕಾರಿ ಮನೋಭಾವದ ಪ್ರತೀಕ. ಅನ್ಯಾಯವಾಗಿ ಹೊರಡಿಸಲಾಗಿರುವ ಈ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ತಕ್ಷಣವೇ ಹಿಂಪಡೆಯಬೇಕು," ಎಂದು ಅವರು ಆಗ್ರಹಿಸಿದ್ದಾರೆ.




