ಚಂದ್ರವಳ್ಳಿ ನ್ಯೂಸ್, ನೆಲಮಂಗಲ:
ಕಾಲೇಜು ಪ್ರಾಜೆಕ್ಟ್ ಕೆಲಸದ ನಿಮಿತ್ತ ಪ್ರಯಾಣಿಸುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು ಕಾರಿನ ಟೈರ್ ಸ್ಫೋಟಗೊಂಡು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.
ಸಪ್ತಗಿರಿ ಕಾಲೇಜಿನ ವಿದ್ಯಾರ್ಥಿನಿಯರಾದ ವೈಷ್ಣವಿ(19) ಮತ್ತು ಜಾನವಿ(19) ಮೃತ ದುರ್ದೈವಿಗಳು. ಇವರಿಬ್ಬರೂ ಪ್ರಾಜೆಕ್ಟ್ ಕಾರ್ಯಕ್ಕಾಗಿ ಕಾರಿನಲ್ಲಿ ಕುಣಿಗಲ್ನ ಉತ್ತರಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ವಿದ್ಯಾರ್ಥಿನಿಯರ ಅಕಾಲಿಕ ನಿಧನದಿಂದ ಕುಟುಂಬಸ್ಥರು, ಸ್ಥಳೀಯರು ಹಾಗೂ ಸಪ್ತಗಿರಿ ಕಾಲೇಜು ಆವರಣದಲ್ಲಿ ಶೋಕದ ಛಾಯೆ ಆವರಿಸಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.




