ಚಂದ್ರವಳ್ಳಿ ನ್ಯೂಸ್, ನವದೆಹಲಿ:
ದೇಶದ ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನಾ ಸಭೆಯ ಸಮಯದಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಕಡ್ಡಾಯವಾಗಿ ಪಠಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಅಗಸ್ಟಿನ್ ಜಾರ್ಜ್ ಮಸಿಹ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ತ್ರಿ ಸದಸ್ಯ ಪೀಠವು ಈ ಆದೇಶವನ್ನು ಹೊರಡಿಸಿದೆ.
ಅರ್ಜಿಯ ಪ್ರಮುಖ ವಿವರಗಳು: ಕೋರಿಕೆ: ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನೆ ವೇಳೆ ಸಂವಿಧಾನದ ಪ್ರಸ್ತಾವನೆ ಪಠಣಕ್ಕೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.
ಉಲ್ಲೇಖ: ಅರ್ಜಿದಾರರ ಪರ ವಕೀಲರು ವಾದ ಮಂಡಿಸುವ ವೇಳೆ ಶಿಕ್ಷಣದ ಹಕ್ಕಿಗೆ ಸಂಬಂಧಿಸಿದ ಸಂವಿಧಾನದ ವಿಧಿ 21ಎ ಅನ್ನು ಉಲ್ಲೇಖಿಸಿ ಮನವಿ ಮಾಡಿದರು.
ನ್ಯಾಯಾಲಯದ ನಿಲುವು: ಶಾಲೆಗಳಲ್ಲಿ ಈಗಾಗಲೇ 6ನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಲಾಗುತ್ತಿದೆ ಮತ್ತು ಕಲಿಸಲಾಗುತ್ತಿದೆ ಎಂಬುದನ್ನು ನ್ಯಾಯಪೀಠ ಪರಿಗಣಿಸಿತು. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ.




