ಚಂದ್ರವಳ್ಳಿ ನ್ಯೂಸ್ ಮೈಸೂರು: ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆಯ ವಿಚಾರವಾಗಿ ಧಮ್ಕಿ ಹಾಕಿದ್ದ ಆರೋಪ ಎದುರಿಸುತ್ತಿರುವ ಇನ್ಸ್‌ಪೆಕ್ಟರ್ ಧನಂಜಯ್ ಅವರಿಗೆ ಇದೀಗ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಇನ್ಸ್‌ಪೆಕ್ಟರ್ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ (ಎಸ್‌ಪಿ) ಅಧಿಕೃತ ದೂರು ನೀಡಿದ್ದಾರೆ.
ಇನ್ಸ್‌ಪೆಕ್ಟರ್ ಧನಂಜಯ್ ತಮ್ಮ ರಾಜಕೀಯ ಹಾಗೂ ಆಡಳಿತಾತ್ಮಕ ಪ್ರಭಾವವನ್ನು ಬಳಸಿಕೊಂಡು ತಮ್ಮ ಮೇಲಾಗಿದ್ದ ವರ್ಗಾವಣೆ ಆದೇಶವನ್ನು ಒಂದೇ ದಿನದಲ್ಲಿ ರದ್ದುಗೊಳಿಸಿಕೊಂಡು, ಅದೇ ಠಾಣೆಯಲ್ಲಿ ಮುಂದುವರಿದಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಮೊಕದ್ದಮೆ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಎಸ್‌ಪಿಯವರಲ್ಲಿ ಮನವಿ ಮಾಡಿದ್ದಾರೆ.
ಪ್ರಕರಣದ ಹಿನ್ನೆಲೆ:
ಟಿ. ನರಸೀಪುರದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದರೆನ್ನಲಾದ ಎಚ್ಚರಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ರಾಜ್ಯ ಮಟ್ಟದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಈ ಘಟನೆಯನ್ನು ಖಂಡಿಸಿ ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ದವು.
ಸಮಾಜದಲ್ಲಿ ಅಶಾಂತಿಗೆ ಕಾರಣರಾಗುವಂತೆ ಮತ್ತು ಧರ್ಮಗಳ ನಡುವೆ ದ್ವೇಷ ಮೂಡಿಸುವ ರೀತಿಯಲ್ಲಿ ಇನ್ಸ್‌ಪೆಕ್ಟರ್ ಧನಂಜಯ್ ಸಂಭಾಷಣೆ ನಡೆಸಿದ್ದಾರೆ ಎಂದು ದೂರಿನಲ್ಲಿ ಸ್ನೇಹಮಯಿ ಕೃಷ್ಣ ಗಂಭೀರವಾಗಿ ಆರೋಪಿಸಿದ್ದಾರೆ.




