ಚಂದ್ರವಳ್ಳಿ ನ್ಯೂಸ್, ತುಮಕೂರು:
ಕೇಂದ್ರ ಸಚಿವರಾದ ವಿ. ಸೋಮಣ್ಣ ಅವರು ಜಿಲ್ಲೆಯ ಗುಬ್ಬಿ ಮತ್ತು ಮಲ್ಲಸಂದ್ರ ಭಾಗದಲ್ಲಿ ಬುಧವಾರ ಪ್ರಮುಖ ಆರೋಗ್ಯ ಮತ್ತು ಮೂಲಸೌಕರ್ಯ ಯೋಜನೆಗಳಿಗೆ ಅಧಿಕೃತವಾಗಿ ಚಾಲನೆ ನೀಡಿದರು.
ಗುಬ್ಬಿಯ ಸಾರ್ವಜನಿಕ ಆಸ್ಪತ್ರೆ ಹಾಗೂ ಮಲ್ಲಸಂದ್ರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಅವರು ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು. ಹೆಣ್ಣುಮಕ್ಕಳಲ್ಲಿ ಕಂಡುಬರುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ ಈ ಲಸಿಕೆ ಅತ್ಯಂತ ಪ್ರಮುಖವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಕರೆ ನೀಡಲಾಯಿತು.
ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ:
ಆರೋಗ್ಯ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ, ಸಚಿವರು ಕಳ್ಳಿಪಾಳ್ಯ ಗೇಟ್ ಬಳಿ ನಿರ್ಮಿಸಲು ಉದ್ದೇಶಿಸಿರುವ ರಸ್ತೆ ಕೆಳ ಸೇತುವೆ ಕಾಮಗಾರಿಗೆ ಅಧಿಕೃತವಾಗಿ ಶಂಕುಸ್ಥಾಪನೆ ನೆರವೇರಿಸಿದರು.
ಈ ಭಾಗದ ಸಾರ್ವಜನಿಕರ ಹಾಗೂ ವಾಹನ ಸವಾರರ ದೀರ್ಘಕಾಲದ ಬೇಡಿಕೆಯಾಗಿದ್ದ ಈ ಕೆಳ ಸೇತುವೆ ನಿರ್ಮಾಣದಿಂದ, ಮುಂದಿನ ದಿನಗಳಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗಲಿದ್ದು, ಅಪಘಾತಗಳ ಸಂಖ್ಯೆಯೂ ಗಣನೀಯವಾಗಿ ಇಳಿಕೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.



