ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಚಿತ್ರದುರ್ಗ ಜಿಲ್ಲೆಯಲ್ಲಿ ತೀವ್ರ ಬರದ ಪರಿಸ್ಥಿತಿ ಎದುರಾಗಿದ್ದು, ತಕ್ಷಣವೇ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಬೆಳೆ ಪರಿಹಾರ ಹಾಗೂ 100% ಬೆಳೆ ವಿಮೆ ಬಿಡುಗಡೆ ಮಾಡಬೇಕೆಂದು ವಂದೇ ಮಾತರಂ ಜಾಗೃತಿ ವೇದಿಕೆ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸುಧಾಕರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಅಸಮರ್ಪಕ ಹಂಚಿಕೆಯಿಂದ ಬಿತ್ತನೆ ಮಾಡಿದ ಬೆಳೆಗಳು ಒಣಗಿ ನಾಶವಾಗುತ್ತಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೀಡಾಗಿದ್ದಾರೆ. ಈಗಾಗಲೇ ಸಾಲದ ಸುಳಿಯಲ್ಲಿರುವ ರೈತರ ಬದುಕು ರಕ್ಷಿಸಲು ಸರಕಾರ ತಕ್ಷಣ ಮಧ್ಯಪ್ರವೇಶಿಸಬೇಕು. ತುರ್ತು ಸಮೀಕ್ಷೆ ನಡೆಸಿ ಬೆಳೆ ನಷ್ಟವನ್ನು ವೈಜ್ಞಾನಿಕವಾಗಿ ಅಂದಾಜಿಸಿ, ಅರ್ಹ ರೈತರಿಗೆ ವಿಳಂಬವಿಲ್ಲದೆ ಬೆಳೆ ನಷ್ಟ ಪರಿಹಾರ ಹಾಗೂ ಬೆಳೆ ವಿಮೆಯನ್ನು ಪಾವತಿಸಬೇಕು ಎಂದು ವೇದಿಕೆಯ ರೈತ ಘಟಕ ಆಗ್ರಹಿಸಿದೆ.
ಸರಕಾರ ಈ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ, ರೈತರನ್ನು ಒಗೂಡಿಸಿ ಉಗ್ರ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಈ ಸಂದರ್ಭದಲ್ಲಿ ಜಾಗೃತಿ ವೇದಿಕೆ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ಪಿ.ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ವಿ.ಅರುಣಕುಮಾರ್, ರೈತ ಘಟಕದ ಅಧ್ಯಕ್ಷ ದೇವರಾಜ್ ನಾಗಣ್ಣ, ರಾಜ್ಯ ಸಂಘಟನಾ ಕಾರ್ಯದರ್ಶಿ ಮಸ್ಕಲ್ ವೈ. ನಾಗರಾಜ್, ರಾಜ್ಯ ಸಂಚಾಲಕ ಕೋಟ್ರೇಶ್, ಮುಖಂಡರಾದ ವಿನಯ್, ಲಕ್ಷ್ಮಣ ರಾವ್, ಪರಮೇಶ್ವರ ಪಿ.ಟಿ., ಜಿಲ್ಲಾ ಉಪಾಧ್ಯಕ್ಷ ಮಸ್ಕಲ್ ಪರಮೇಶ್, ಬಾಬು, ಗಿರೀಶ್ ಹಾಗೂ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.



