ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ರಾಜಕಾರಣದಲ್ಲಿ ಸದ್ಯ 'ವಂದೇ ಮಾತರಂ' ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕೆಂದು ಸರ್ಕಾರ ಹೊರಡಿಸಿರುವ ಆದೇಶಕ್ಕೆ ವಿರೋಧ ಪಕ್ಷದಿಂದ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಸರ್ಕಾರದ ನಿರ್ಧಾರವನ್ನು ಖಂಡಿಸಿ ಸೆಪ್ಟೆಂಬರ್ 15ರಿಂದ ಐದು ದಿನಗಳ ಕಾಲ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಾದಯಾತ್ರೆಗೆ ಸಜ್ಜಾಗಿದೆ.
ಸೆಪ್ಟೆಂಬರ್ 15ರಿಂದ 5 ದಿನಗಳ ಕಾಲ ಪಾದಯಾತ್ರೆ:
ಸರ್ಕಾರದ ಈ ವಿವಾದಾತ್ಮಕ ಆದೇಶವನ್ನು ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿ ಸೆಪ್ಟೆಂಬರ್ 15ರಿಂದ ಸತತ ಐದು ದಿನಗಳ ಕಾಲ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಸಲು ಬಿಜೆಪಿ ನಿರ್ಧರಿಸಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಅರ್ಧ ಕಿಲೋಮೀಟರ್‌ನಿಂದ ಒಂದು ಕಿಲೋಮೀಟರ್‌ವರೆಗೆ ಪಾದಯಾತ್ರೆ ನಡೆಸಿ, ಬಳಿಕ ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಅಧಿಕೃತ ಮನವಿ ಪತ್ರ ಸಲ್ಲಿಸಲಾಗುತ್ತದೆ. ಈ ಮೂಲಕ ಸಚಿವ ಸಂಪುಟದ ಆದೇಶವನ್ನು ವಾಪಸ್ ಪಡೆಯುವಂತೆ ರಾಜ್ಯ ಸರ್ಕಾರದ ಮೇಲೆ ಬಿಜೆಪಿ ತೀವ್ರ ಒತ್ತಡ ಹೇರಲು ಮುಂದಾಗಿದೆ.
ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿ:
ರಾಜ್ಯದಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವ ಸಂಪುಟದ ನಿರ್ಧಾರದ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.
“ವಂದೇ ಮಾತರಂ ಕೇವಲ ಒಂದು ಹಾಡಲ್ಲ, ಅದು ನಮ್ಮ ರಾಷ್ಟ್ರೀಯತೆಯ ಪ್ರತೀಕ. ಅಂತಹ ಗೀತೆಯ ಕುರಿತು ಸರ್ಕಾರ ನಿರ್ಬಂಧ ವಿಧಿಸಿರುವುದು ದುರ್ದೈವ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಪಸಂಖ್ಯಾತರ ಓಲೈಕೆಯೇ ಸರ್ಕಾರದ ಗುರಿ: ವಿಜಯೇಂದ್ರ ಆರೋಪ
“ಕೇವಲ ಅಲ್ಪಸಂಖ್ಯಾತರನ್ನು ಓಲೈಸುವ ಸಲುವಾಗಿಯೇ ಕಾಂಗ್ರೆಸ್ ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ಸೆಪ್ಟೆಂಬರ್ 15 ರಿಂದ ಐದು ದಿನಗಳ ಕಾಲ 224 ಕ್ಷೇತ್ರಗಳಲ್ಲಿ ಪಾದಯಾತ್ರೆ ಹಮ್ಮಿಕೊಂಡು, ತಹಶೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಸರ್ಕಾರದ ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸಲಿದ್ದೇವೆ. ಕಾಂಗ್ರೆಸ್ ನಾಯಕರು ಅಲ್ಪಸಂಖ್ಯಾತರನ್ನು ಖುಷಿಪಡಿಸಲು ಇಂತಹ ದೇಶಪ್ರೇಮದ ವಿಚಾರಗಳಲ್ಲೂ ರಾಜಕೀಯ ಮಾಡುತ್ತಿದ್ದಾರೆ” ಎಂದು ಬಿ.ವೈ. ವಿಜಯೇಂದ್ರ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.




