ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತಿದ್ದು, ನಿಯೋಜಿತ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ವಾನುಮತದಿಂದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ, ಡಿ.ಕೆ. ಶಿವಕುಮಾರ್ ಅವರು ಲೋಕ ಭವನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಹಕ್ಕು ಮಂಡನೆಯನ್ನು ಪುರಸ್ಕರಿಸಿದ ರಾಜ್ಯಪಾಲರು, ಸರ್ಕಾರ ರಚಿಸಲು ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕೃತ ಆಹ್ವಾನ ನೀಡಿದ್ದಾರೆ.
"ಜನರ ಸೇವೆಗೆ ನಾವು ಬದ್ಧ" - ಡಿಕೆಶಿ ವಿನಮ್ರ ಪೋಸ್ಟ್:
ಸಿಎಲ್‌ಪಿ ನಾಯಕರಾಗಿ ಆಯ್ಕೆಯಾದ ಬಳಿಕ ಡಿ.ಕೆ. ಶಿವಕುಮಾರ್ ಅವರು 'X' ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.
"ವಿಧಾನಸೌಧದಲ್ಲಿ ನಡೆದ ಸಿಎಲ್‌ಪಿ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ನನ್ನನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಕ್ಕೆ ನಾನು ಅತ್ಯಂತ ವಿನಮ್ರನಾಗಿದ್ದೇನೆ. ಸಮಗ್ರತೆ, ಸಮರ್ಪಣಾ ಭಾವ ಮತ್ತು ನಿರ್ದಿಷ್ಟ ಉದ್ದೇಶದೊಂದಿಗೆ ಕರ್ನಾಟಕದ ಜನತೆಯ ಸೇವೆ ಮಾಡಲು ನಾನು ಹಾಗೂ ಕಾಂಗ್ರೆಸ್ ಪಕ್ಷ ಬದ್ಧರಾಗಿದ್ದೇವೆ," ಎಂದು ಅವರು ಬರೆದುಕೊಂಡಿದ್ದಾರೆ.
ಸಿದ್ದರಾಮಯ್ಯ ಸಂಪುಟ ವಿಸರ್ಜನೆ:
ಇದಕ್ಕೂ ಮುನ್ನ, ಗುರುವಾರ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮರುದಿನವೇ ರಾಜೀನಾಮೆಯನ್ನು ಅಂಗೀಕರಿಸಿದ್ದ ರಾಜ್ಯಪಾಲ ಗೆಹ್ಲೋಟ್ ಅವರು ಹಾಲಿ ಸಚಿವ ಸಂಪುಟವನ್ನು ವಿಸರ್ಜಿಸಿದ್ದರು. ಇದೀಗ ಜೂನ್ 3ರಂದು ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನೂತನ ಸರ್ಕಾರ ಅಧಿಕೃತವಾಗಿ ಅಸ್ತಿತ್ವಕ್ಕೆ ಬರಲಿದೆ.



