ಚಂದ್ರವಳ್ಳಿ ನ್ಯೂಸ್, ಕಲಬುರಗಿ:
ಮುಂಬರುವ ಎಲ್ಲಾ ಚುನಾವಣೆಗಳನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಹಾಗೂ ಜನತಾ ದಳ (ಜೆಡಿಎಸ್) ಮೈತ್ರಿ ಮಾಡಿಕೊಂಡೇ ಎದುರಿಸಲಿವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಈಶಾನ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಲಬುರಗಿಗೆ ಆಗಮಿಸಿದ್ದ ಅವರು, ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಶ್ವಾಸ ವ್ಯಕ್ತಪಡಿಸಿದರು. ಮೈತ್ರಿ ಬಲದಿಂದ ಮುಂಬರುವ ದಿನಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದ್ದೇವೆ ಎಂದರು.
ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ: ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ರಾಜ್ಯದಲ್ಲಿ ಹಲವಾರು ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಶಿಕ್ಷಕರು ಹಾಗೂ ಅಧ್ಯಾಪಕರಿಗೆ ಸರಿಯಾಗಿ ವೇತನ ಪಾವತಿಯಾಗುತ್ತಿಲ್ಲ ಎಂದು ದೂರಿದರು. ಮಕ್ಕಳ ಶೂ ಮತ್ತು ಸಾಕ್ಸ್ ಖರೀದಿಯಲ್ಲೂ ಭ್ರಷ್ಟಾಚಾರ ನಡೆದಿದೆ ಎಂದು ಗಂಭೀರ ಆರೋಪ ಮಾಡಿದರು. ರೈತರಿಗೆ 2,500 ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದರೂ ಈವರೆಗೆ ಹಣ ನೀಡಿಲ್ಲ ಎಂದು ಟೀಕಿಸಿದರು.
ಮುಖ್ಯಮಂತ್ರಿಗಳು ಹಾಗೂ ಆಡಳಿತ ಪಕ್ಷದ ನಾಯಕರು ಹಣದ ಬಲ ಮತ್ತು ಜಾತಿ ರಾಜಕಾರಣದ ಮೂಲಕ ಚುನಾವಣೆ ಗೆಲ್ಲಲು ಮುಂದಾಗಿದ್ದಾರೆ ಎಂದು ಕಿಡಿಕಾರಿದ ಅವರು, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಅವರನ್ನು ಭರ್ಜರಿ ಮತಗಳಿಂದ ಗೆಲ್ಲಿಸುವ ಮೂಲಕ ಇದಕ್ಕೆ ತಕ್ಕ ಉತ್ತರ ನೀಡಬೇಕೆಂದು ಶಿಕ್ಷಕರಲ್ಲಿ ಮನವಿ ಮಾಡಿದರು. ಇದೇ ವೇಳೆ, ದೇಶದ ಹೆಮ್ಮೆಯ ಪೈಲಟ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡುವುದಾಗಿಯೂ ಅವರು ತಿಳಿಸಿದರು.
ಉಮೇದುವಾರಿಕೆ ಸಲ್ಲಿಕೆ: ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಜಹಿರಾ ನಸೀಮ್ ಅವರಿಗೆ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಂಡೆಪ್ಪ ಕಾಶಂಪುರ್, ವೆಂಕಟರಾವ್ ನಾಡಗೌಡ, ಶಾಸಕ ಎನ್. ರವಿಕುಮಾರ್, ಶೈಲೇಂದ್ರ ಬೆಲ್ದಾಳೆ ಸೇರಿದಂತೆ ಅನೇಕ ಪ್ರಮುಖ ನಾಯಕರು ಉಪಸ್ಥಿತರಿದ್ದರು.
ಇದೇ ವೇಳೆ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಕೂಡ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ, ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಶಾಸಕರಾದ ತಿಪ್ಪಣ್ಣಪ್ಪ ಕಮಕನೂರು, ಅಲ್ಲಮಪ್ರಭು ಪಾಟೀಲ್ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.




