ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸೋಮವಾರದಿಂದ ಹೊಸದಾಗಿ ಜಾತಿ ಸಮೀಕ್ಷೆ ಮಾಡಲು ರಾಜ್ಯ ಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ. ಆದರೆ ಕ್ರಿಶ್ಚಿಯನ್ ಜೊತೆ ಒಕ್ಕಲಿಗ ಎಂದು ಸೇರಿಸಿರುವುದು ಸಮುದಾಯವನ್ನೇ ಕೆರಳುವಂತೆ ಮಾಡಿದೆ.
ಇಡೀ ಒಕ್ಕಲಿಗ ಸಮುದಾಯದ ಘಟಾನುಘಟಿ ನಾಯಕರು ಶನಿವಾರ ಆದಿಚುಂಚನಗಿರಿ ಶ್ರೀಗಳ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ಮೂಲಕ ಶಕ್ತಿ ಪ್ರದರ್ಶನ ಮಾಡಿದರು. ಆದಿ ಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಶ್ರೀಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಕ್ಷ ಭೇದವಿಲ್ಲದೆ ಮೂರು ಪಕ್ಷಗಳ ನಾಯಕರು ಭಾಗಿಯಾದರು.
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಡಿಸಿಎಂ ಡಿಕೆ ಶಿವಕುಮಾರ್, ಅಶ್ವತ್ಥ್ ನಾರಾಯಣ್, ಆರ್.ಅಶೋಕ್, ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.
ಜಾತಿ ಸಮೀಕ್ಷೆ ಕುರಿತು ಸುದೀರ್ಘ ಚರ್ಚೆ ಮಾಡುವ ಮೂಲಕ ಮಹತ್ವದ ನಿರ್ಧಾರವನ್ನೂ ಒಕ್ಕಲಿಗ ನಾಯಕರು ಕೈಗೊಂಡರು.
ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಯಾವುದೇ ಕಾರಣಕ್ಕೂ ಕ್ರಿಶ್ಚಿಯನ್ ಧರ್ಮದ ಜೊತೆ ಹಿಂದೂ ಒಕ್ಕಲಿಗರನ್ನು ಸೇರಿಸಬಾರದು. ಜಾತಿ ಗಣತಿಯ ಸಮೀಕ್ಷೆ ಮುಂದೂಡಬೇಕು ಎಂದು ಆಗ್ರಹ ಮಾಡಿದರು.
ಸಭೆಯಲ್ಲಿ ಕೈಗೊಂಡ ತೀರ್ಮಾನಗಳು-
ಜಾತಿಗಣತಿ ಸಮೀಕ್ಷೆ ಪಟ್ಟಿಯಲ್ಲಿ ಧರ್ಮ ಹಿಂದೂ, ಜಾತಿ ಒಕ್ಕಲಿಗ ಬರೆಸಲು ನಿರ್ಣಯ ಕೈಗೊಳ್ಳಲಾಯಿತು. ಯಾರೂ ಗೊಂದಲ ಮಾಡಿಕೊಳ್ಳದಂತೆ ನಿರ್ಮಲಾನಂದನಾಥ ಶ್ರೀ ಸಲಹೆ ಕೊಟ್ಟರು. ಉಪ ಜಾತಿಯಲ್ಲೂ ಒಕ್ಕಲಿಗ ಎಂದೇ ನಮೂದಿಸಲು ನಿರ್ಣಯ ತೆಗೆದುಕೊಳ್ಳಲಾಗಿದೆ. ನಿರ್ಣಯವನ್ನು ನಿರ್ಮಲಾನಂದನಾಥ ಶ್ರೀ ಮಂಡಿಸಿದರು, ಅದಕ್ಕೆ ಸಭೆಯಲ್ಲಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಕುಮಾರಸ್ವಾಮಿ, ಸದಾನಂದಗೌಡ ಸೇರಿ ಹಲವು ನಾಯಕರು ಅನುಮೋದನೆ ಕೊಟ್ಟರು.
ಜಾತಿ ಸಮೀಕ್ಷೆಯನ್ನು 45 ದಿನಗಳ ಕಾಲ ಮುಂದೂಡಿಕೆ ಮಾಡಬೇಕು ಎಂದು ಒತ್ತಾಯಿಸಲಾಯಿತು. ಒಂದು ವೇಳೆ ಕ್ರಿಶ್ಚಿಯನ್ ಒಕ್ಕಲಿಗ ಎಂದು ಉಲ್ಲೇಖ ಮಾಡಿದರೆ, ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್, ಸಿ.ಟಿ.ರವಿ ಎಚ್ಚರಿಕೆ ಕೊಟ್ಟರು.
ಸರ್ಕಾರ ಬೆಂಕಿ ಹಚ್ಚಲು ಏನ್ ಮಾಡಬೇಕೋ ಅದನ್ನು ಮಾಡುತ್ತಿದೆ ಎಂದು ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ ಆರೋಪಿಸಿದರು.
ಒಕ್ಕಲಿಗರ ಸಭೆಯಲ್ಲಿ ನಾಯಕರ ನಡೆ ಎಲ್ಲರ ಕುತೂಹಲಕ್ಕೆ ಕಾರಣವಾಯಿತು. ಜಾತಿ ವಿಚಾರದಲ್ಲಿ ಸಿಎಂಗೆ ಡಿಸಿಎಂ ಒಳ್ಳೆಯ ಪ್ರಶ್ನೆ ಕೇಳಿದ್ದಾರೆ ಎಂದು ಕುಮಾರಸ್ವಾಮಿ ಶ್ಲಾಘನೆ ವ್ಯಕ್ತಪಡಿಸಿದರು. ಇದಕ್ಕೆ ಕೆಲ ನಾಯಕರು ಚಪ್ಪಳೆ ತಟ್ಟಿದರು. ಸಭೆಯಲ್ಲಿ ಡಿಸಿಎಂ ಡಿಕೆಶಿ, ಕುಮಾರಸ್ವಾಮಿ ಮುಖಾಮುಖಿಯಾಗಿರುವುದು ಸಾಕಷ್ಟು ಕುತೂಹಲಕ್ಕೆ ಕಾಣವಾಯಿತು.
ಒಕ್ಕಲಿಗ ನಾಯಕರಿಂದ ಹೊಸ ಜಾತಿಗಣತಿ ಸಮೀಕ್ಷೆಗೆ ವಿರೋಧ ವ್ಯಕ್ತವಾಯಿತು. ಕ್ರಿಶ್ಚಿಯನ್ ಜೊತೆ ಒಕ್ಕಲಿಗರನ್ನು ಸೇರಿಸಿರುವುದು ಆಕ್ರೋಶಕ್ಕೆ ಕಾರಣವಾಯಿತು.

