ಚಂದ್ರವಳ್ಳಿ ನ್ಯೂಸ್, ನವದೆಹಲಿ:
ನವೆಂಬರ್ ಕ್ರಾಂತಿ ಇಲ್ಲ, ಡಿಸೆಂಬರ್ ಕ್ರಾಂತಿ ಇಲ್ಲ. ಜನವರಿ, ಫೆಬ್ರವರಿಗೂ ಕ್ರಾಂತಿ ಆಗುವುದಿಲ್ಲ. 2028ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ ಕ್ರಾಂತಿ ಆಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ದೆಹಲಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ ಕ್ರಾಂತಿ ಕುರಿತು, ಇದೇ ತಿಂಗಳು 22 ಹಾಗೂ 26ರ ತಾವು ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರದ ಬಗ್ಗೆ ಚರ್ಚೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ಯಾರೋ ಸುಮ್ಮನೆ ಬರೆದಿದ್ದಾರೆ. ಬಿಹಾರ ಚುನಾವಣೆ ಸೇರಿದಂತೆ ಅನೇಕ ಜವಾಬ್ದಾರಿಗಳನ್ನು ಪಕ್ಷ ನಮಗೆ ನೀಡಿದೆ. ನಾವು ಅದನ್ನು ಮಾಡುತ್ತಿದ್ದೇವೆ. ಇದರ ಹೊರತಾಗಿ ಬೇರೆ ಯಾವುದೇ ಕ್ರಾಂತಿ ಆಗುವುದಿಲ್ಲ ಎಂದು ಶಿವಕುಮಾರ್ ತಿಳಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುತ್ತೀರಾ ಎನ್ನುವ ಪತ್ರಕರ್ತರ ಪ್ರಶ್ನೆಗೆ, ಯಾರನ್ನೂ ನಾನು ಭೇಟಿ ಮಾಡುವುದಿಲ್ಲ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನ್ನ ಬಳಿ ಯಾರೂ ಚರ್ಚೆ ಮಾಡಿಲ್ಲ. ಯಾವುದೇ ನಾಯಕರನ್ನು ನಾನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ.
ಪಕ್ಷ ಸಂಘಟನೆ ವಿಚಾರವಾಗಿ ಚರ್ಚೆ ಮಾಡಲಾಗುವುದು. ಮತಗಳ್ಳತನ ವಿಚಾರವಾಗಿ ಈಗಾಗಲೇ ಸಭೆ ಮಾಡಿದ್ದೇವೆ, ಇಂದೂ ಮಾಡಿದ್ದೇವೆ ಎಂದು ಡಿಸಿಎಂ ತಿಳಿಸಿದರು.
ಸಂಪುಟ ವಿಸ್ತರಣೆ ಹಾಗೂ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಏನಿದ್ದರೂ ನಿಮ್ಮದು (ಮಾಧ್ಯಮ). ನಾಯಕತ್ವ ಬದಲಾವಣೆ ಬಗ್ಗೆ ಏನಾದರೂ ನಾನು ಹೇಳಿದ್ದೇನಾ?. ಸಿಎಂ ಏನಾದರೂ ಹೇಳಿದ್ದಾರಾ?. ಪಕ್ಷ ಏನು ಹೇಳುತ್ತದೋ ಅದನ್ನು ಕೇಳಿಕೊಂಡು ಹೋಗುತ್ತೇವೆ ಎಂದು ಹೇಳಿದ್ದೇವೆ.
ಸಿಎಂ ಐದು ವರ್ಷ ಇರಬೇಕು ಎಂದರೆ ಐದು ವರ್ಷ ಇರುತ್ತಾರೆ. ಹತ್ತು ವರ್ಷ ಇರಬೇಕು ಎಂದರೆ ಹತ್ತು ವರ್ಷವೂ ಇರುತ್ತಾರೆ. 15 ವರ್ಷ ಇರಬೇಕೆಂದರೆ 15 ವರ್ಷ ಕೂಡ ಇರುತ್ತಾರೆ ಎಂದು ಡಿಸಿಎಂ ಸೂಚ್ಯವಾಗಿ ಹೇಳಿದರು.
ಪಕ್ಷವು ನಮಗೆ ಕೊಟ್ಟ ಕೆಲಸ ಮಾಡಿಕೊಂಡು ಹೋಗುತ್ತಿರಬೇಕು. ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ರೇಖೆ ಬಿಟ್ಟು ಎಂದಿಗೂ ಹೋಗುವುದಿಲ್ಲ ಎಂದು ತಿಳಿಸಿದರು.

